ಚಿತ್ತಾಪುರ ಪಟ್ಟಣದಲ್ಲಿ ಮಾರ್ಚ್ 8 ರಂದು ಸಾವಿರಾರು ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ತಾಲ್ಲೂಕು ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯಕ್ರಮ ಯಶಸ್ಸಿಗೆ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.
ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನೊಳಗೊಂಡು ರಚಿಸಲಾದವಿವಿಧ ಸಮಿತಿ ಸದಸ್ಯರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಈ ಪ್ರದೇಶದ ಸಚಿವರು, ಶಾಸಕರು, ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಎಲ್ಲಿಯೂ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನೆರವೇರಿಸಬೇಕು ಎಂದರು.
ಕಾರ್ಯಕ್ರಮಕ್ಕೆ ತಾಲ್ಲೂಕಿನ ವಿವಿಧ ಭಾಗಗಳಿಂದ ಸುಮಾರು 10 ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ
ಸೇರುವುದರಿಂದ ಆಸನ ವ್ಯವಸ್ಥೆ, ಸಂಪೂರ್ಣ ಶಾಮಿಯಾನ ಇರುವಂತೆ ನೊಡಿಕೊಳ್ಳಬೇಕು. ಕುಡಿಯುವ ನೀರಿನ ವ್ಯವಸ್ಥೆ,
ಸಾರ್ವಜನಿಕರಿಗೆ ನೂಕು ನುಗ್ಗಲು ಆಗದಂತೆ ಊಟಕ್ಕೆ ಹೆಚ್ಚಿನ ಕೌಂಟರ್ ತೆರೆಯಬೇಕು. ತಾಲ್ಲೂಕಿನ ವಿವಿಧ ಕಡೆಯಿಂದ ಜನರು ಆಗಮಿಸುವುದರಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬೇಸಿಗೆ ಸಮಯ ಇದಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಸೌಲಭ್ಯ ಇರುವಂತೆ ಅಧಿಕಾರಿಗಳು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಹೆಚ್ಚುವರಿಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪವಿಭಾಗಾಧಿಕಾರಿಗಳಾದ ಸಾಹಿತ್ಯಾ ಆಲದಕಟ್ಟಿ, ಪ್ರಭುರೆಡ್ಡಿ, ಚಿತ್ತಾಪುರ ತಹಶೀಲ್ದಾರ್ನಾಗಯ್ಯ ಹಿರೇಮಠ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
₹ 1069 ಕೋಟಿ ಮೊತ್ತದ ಕಾಮಗಾರಿಗಳಿಗೆ ಚಾಲನೆ
ಚಿತ್ತಾಪುರದಲ್ಲಿ ಮಾರ್ಚ್ 8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ₹ 1069 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಣ್ಣ ನೀರಾವರಿ ಇಲಾಖೆ ಕೆ.ಎನ್.ಎನ್.ಎಲ್ ಕರ್ನಾಟಕ ಗೃಹ ಮಂಡಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಹೀಗೆ ಸುಮಾರು 20 ಇಲಾಖೆಯ ₹ 979.83 ಕೋಟಿ ಮೊತ್ತದ 777 ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಇದಲ್ಲದೆ ಕಾರ್ಯಕ್ರಮದಲ್ಲಿ ವಿವಿಧ 8 ಇಲಾಖೆಗಳ ಮೂಲಕ ಪೂರ್ಣಗೊಂಡ 23 ಕಾಮಗಾರಿಗಳ ಉದ್ಘಾಟನೆ ನಡೆಯಲಿದ್ದು ಇವುಗಳ ಒಟ್ಟು ಅಂದಾಜು ವೆಚ್ಚ ಸುಮಾರು ₹ 89.57 ಕೋಟಿ ಆಗಿದೆ. ಇದರಲ್ಲಿ ಮುಖ್ಯವಾಗಿ ಕರ್ನಾಟಕ ಗೃಹ ಮಂಡಳಿ ಲೋಕೋಪಯೋಗಿ ಇಲಾಖೆ ನಿರ್ಮಿತಿ ಕೇಂದ್ರ ಕೃಷಿ ಇಲಾಖೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅರಣ್ಯ ಇಲಾಖೆ ಹಾಗೂ ಚಿತ್ತಾಪುರ ಮತ್ತು ವಾಡಿ ಪುರಸಭೆಯ ಕಾಮಗಾರಿಗಳು ಲೋಕಾರ್ಪಣೆಯಾಗಲಿವೆ.

