ಕಲಬುರಗಿ: ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ವ್ಯವಸ್ಥೆಯನ್ನು ಬಲಪಡಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರು ಹಾಗೂ ಅಳಂದ ಕ್ಷೇತ್ರದ ಶಾಸಕರಾದ B. R. Patil ಉಪಸ್ಥಿತರಿದ್ದರು.
ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಯೋಜನೆಗಳ ಭಾಗವಾಗಿ ಖಂಡಾಳದಿಂದ ಮಟಕಿ, ನಿರಗುಡಿದಿಂದ ಪಡಸಾವಳಿ, ಬಸವಂತವಾಡಿದಿಂದ ನಿಂಬರ್ಗಾ, ಹಳ್ಳಿಸಲಗರದಿಂದ ಕೊಡಲಹಂಗರಗಾ ಮತ್ತು ಬಂಗರಗಾ–ಚಿತಲಿ–ಸಾಲೆಗಾಂವದಿಂದ ಹೆಬಳಿ ನಾಲಾಕ್ಕೆ ಅಡ್ಡಲಾಗಿ ಅಣೆಕಟ್ಟು/ಬಿಸಿಬಿಗಳ ನಿರ್ಮಾಣ ಹಾಗೂ ನಾಲಾ ಅಗೆತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಗಳಿಗೆ ಸುಮಾರು 47.50 ಕೋಟಿ ರೂ.ಗಳ ಅಂದಾಜು ವೆಚ್ಚ ನಿಗದಿಪಡಿಸಲಾಗಿದೆ.
ಈ ಕಾಮಗಾರಿಗಳು ಪೂರ್ಣಗೊಂಡ ನಂತರ ಪ್ರದೇಶದಲ್ಲಿ ನೀರಿನ ಸಂಗ್ರಹಣೆಯ ಸಾಮರ್ಥ್ಯ ಹೆಚ್ಚುವ ಜೊತೆಗೆ ಅಂತರ್ಜಲ ಮಟ್ಟ ಏರಿಕೆಯಾಗಲಿದೆ. ಇದರಿಂದ ರೈತರಿಗೆ ನೀರಾವರಿ ಸೌಲಭ್ಯ ಉತ್ತಮವಾಗುವಷ್ಟೇ ಅಲ್ಲದೆ, ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರಾದ ಎನ್ಎಸ್ ಬೋಸರಾಜು ಅವರು, ರಾಜ್ಯ ಸರ್ಕಾರ ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ನೀರಾವರಿ ಯೋಜನೆಗಳ ಮೂಲಕ ರೈತರ ಬದುಕು ಸುಧಾರಿಸುವ ದಿಶೆಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.
ಇದೇ ವೇಳೆ ಶಾಸಕ ಬಿ ಆರ್ ಪಾಟೀಲ್ ಅವರ ಸೇವೆಯನ್ನು ಶ್ಲಾಘಿಸಿದ ಸಚಿವರು, “ಬಿ.ಆರ್. ಪಾಟೀಲ್ ಅವರು ನನ್ನ ದೀರ್ಘಕಾಲದ ಸ್ನೇಹಿತರಾಗಿದ್ದು, ಅವರ ನಿರಂತರ ಪರಿಶ್ರಮ ಮತ್ತು ಸಾಮಾಜಿಕ ನ್ಯಾಯದ ಪರವಾದ ನಿಲುವಿನಿಂದಾಗಿ ಅಳಂದ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲು ಸಾಧ್ಯವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾದನ ಹಿಪ್ಪರಗಾ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಅಭಿನವ ಶಿವಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ವೇದಿಕೆ ಮೇಲೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


