ಕಲಬುರಗಿ: ಕಲಬುರಗಿಯ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ, ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು, ಪರಿಷತ್ತಿನ ಸಭಾ ನಾಯಕರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಅಧ್ಯಕ್ಷತೆ ವಹಿಸಿ ಇಲಾಖೆಯ ಕಾರ್ಯಗಳ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಕಲಬುರಗಿ ವಿಭಾಗದಲ್ಲಿ ಪ್ರಸ್ತುತ ಕೈಗೆತ್ತಿಕೊಂಡಿರುವ ವಿವಿಧ ಸಣ್ಣ ನೀರಾವರಿ ಯೋಜನೆಗಳು, ಪೂರ್ಣಗೊಂಡಿರುವ ಕಾಮಗಾರಿಗಳು ಹಾಗೂ ಎಸ್‌ಸಿ/ಎಸ್‌ಟಿ ಉಪಯೋಜನೆ (SCPTSP) ಅಡಿಯಲ್ಲಿ ಜಾರಿಯಲ್ಲಿರುವ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ಪಡೆದುಕೊಳ್ಳಲಾಯಿತು. ವಿವಿಧ ತಾಲ್ಲೂಕುಗಳಲ್ಲಿ ನಡೆಯುತ್ತಿರುವ ಅಣೆಕಟ್ಟು ನಿರ್ಮಾಣ, ಬಿಸಿಬಿ ನಿರ್ಮಾಣ, ನಾಲಾ ಅಗೆತ ಸೇರಿದಂತೆ ಹಲವು ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರಾದ ಎನ್ ಎಸ್ ಬೋಸರಾಜು ಅವರು, ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವುದು ಅತ್ಯಂತ ಮುಖ್ಯವಾಗಿದೆ. ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಲ್ಲದೆ, ರಾಜ್ಯದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಅದಕ್ಕಾಗಿ ಚೆಕ್ ಡ್ಯಾಂ, ಬಂಡೆ ಕಟ್ಟೆ, ನಾಲಾ ಅಭಿವೃದ್ಧಿ ಸೇರಿದಂತೆ ನೀರಿನ ಸಂಗ್ರಹಣೆಗೆ ಸಹಾಯಕವಾಗುವ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವರು ಸೂಚಿಸಿದರು. ಗ್ರಾಮೀಣ ಪ್ರದೇಶದ ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚಿಸಲು ಈ ಯೋಜನೆಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ಹೇಳಿದರು.
ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *