ಸಿಂಧನೂರು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವರ 35ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ 101 ಕುಂಭೋತ್ಸವ ಕಾರ್ಯಕ್ರಮ ಅತ್ಯಂತ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ವಿಶೇಷ ಪೂಜೆಗಳು ಹಾಗೂ ಭಕ್ತರಿಗಾಗಿ ದೈವದರ್ಶನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗಿತ್ತು.
ಜಾತ್ರಾ ಮಹೋತ್ಸವದ ನಿಮಿತ್ತ ದೇವಾಲಯವನ್ನು ಆಕರ್ಷಕವಾಗಿ ಅಲಂಕರಿಸಲಾಗಿದ್ದು, ಗ್ರಾಮದೆಲ್ಲೆಡೆ ಹಬ್ಬದ ವಾತಾವರಣ ಮೂಡಿತ್ತು. ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಜಾತ್ರೆಯ ವಿಶೇಷವಾಗಿ 101 ಕುಂಭೋತ್ಸವ ಕಾರ್ಯಕ್ರಮ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ಭಕ್ತಾದಿಗಳಿಗೆ ನಿರಂತರವಾಗಿ ಅನ್ನಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ದೂರದೂರಿನಿಂದ ಆಗಮಿಸಿದ ಭಕ್ತರು ಪ್ರಸಾದ ಸ್ವೀಕರಿಸಿ ಸಂತೋಷಪಟ್ಟರು.
ಈ ಕಾರ್ಯಕ್ರಮದಲ್ಲಿ ಕೆ. ಹೊಸಹಳ್ಳಿ ಶ್ರೀ ಶರಣಬಸವೇಶ್ವರ ಸೇವಾ ಸಮಿತಿ ಸದಸ್ಯರು, ಯುವಕ ಮಂಡಳಿ ಸದಸ್ಯರು, ಹಳೆಯ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಹಿರಿಯರು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಗ್ರಾಮದ ಸಾರ್ವಜನಿಕರು ಸಹಕಾರ ನೀಡಿದ್ದು, ಜಾತ್ರಾ ಮಹೋತ್ಸವವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮತ್ತು ಉತ್ಸಾಹದಿಂದ ನೆರವೇರಿತು.


