ಇಂದು ನಮ್ಮ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ರಾಜ್ಯದ ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ಖಗೋಳ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಆಧುನಿಕ ತಂತ್ರಜ್ಞಾನದ ಸ್ಪರ್ಶನೀಡಿರುವ ‘ಶಾಲೆಯ ಅಂಗಳದಲ್ಲಿ ತಾರಾಲಯ’ (ಸಂಚಾರಿ ಡಿಜಿಟಲ್ ತಾರಾಲಯ) ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರೊಂದಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಚಾಲನೆ ನೀಡಲಾಯಿತು.
ಈಗಾಗಲೇ ರಾಜ್ಯದಲ್ಲಿ 11 ಡಿಜಿಟಲ್ ಮೊಬೈಲ್ ಪ್ಲಾನಿಟೋರಿಯಂ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹೈಸ್ಕೂಲ್ ಗಳಲ್ಲಿ 46 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಿದೆ.
ರಾಜ್ಯದಾದ್ಯಂತ 16.75 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಚಾರಿ ಡಿಜಿಟಲ್ ತಾರಾಲಯ ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿಯನ್ನು ಬಿತ್ತುವಲ್ಲಿ ಯಶಸ್ವಿಯಾಗಿವೆ.
ಭವಿಷ್ಯದಲ್ಲಿ ಗ್ರಾಮೀಣ- ನಗರ ಎಂಬ ಶೈಕ್ಷಣಿಕ ಅಂತರ ಕಡಿಮೆಯಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಈ ಯೋಜನೆ ನೆರವಾಗಲಿದೆ.
ಕಾರ್ಯಕ್ರಮದಲ್ಲಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

