ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಅಧೀನದಲ್ಲಿ ಸುಮಾರು 7,500 ಎಕರೆ ಭೂಮಿ ಇದ್ದು, ಇದರಲ್ಲಿ 15 ಎಕರೆಯನ್ನು ಜವಳಿ ಇಲಾಖೆಗೆ ಮಂಜೂರು ಮಾಡಿದರೆ ಸಿಂಧನೂರಲ್ಲಿ ಜವಳಿ ಪಾರ್ಕ್ ಸ್ಥಾಪನೆ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಬಸನಗೌಡ ಬಾದರ್ಲಿ ಅವರ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಜವಳಿ ಪಾರ್ಕ್ ಸ್ಥಾಪನೆಗೆ 15 ಎಕರೆ ಭೂಮಿ ಗುರುತಿಸಿ ಇಲಾಖೆಗೆ ಹಸ್ತಾಂತರಿಸಲು ಕಂದಾಯ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೆ, ಒಂದೇ ಕಡೆ 15 ಎಕರೆ ಸರ್ಕಾರದ ಭೂಮಿ ಲಭ್ಯ ಇಲ್ಲ ಎಂದು ತಿಳಿಸಿದ್ದಾರೆ.
ಉದ್ಯೋಗ ಅರಸಿ ಸಿಂಧನೂರು ತಾಲೂಕಿನ ಯುವಕ ಯುವತಿಯರು ರಾಜ್ಯದ ವಿವಿಧ ಸ್ಥಳಗಳಿಗೆ ವಲಸೆ ಹೋಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಜವಳಿ ಪಾರ್ಕ್ ಸ್ಥಾಪನೆ ಮಾಡಿದರೆ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗಲಿದೆ. ಆದರೆ, ಜವಳಿ ಪಾರ್ಕ್ ನಿರ್ಮಿಸಲು ಅಗತ್ಯ ಪ್ರಮಾಣದ ಸರ್ಕಾರದ ಭೂಮಿ ಸಿಂಧನೂರು ತಾಲೂಕಿನಲ್ಲಿ ಇಲ್ಲ. ಕೇಂದ್ರ ಸರ್ಕಾರದ ಭೂಮಿ ಲಭ್ಯವಿದ್ದು, ಈ ಭೂಮಿಯನ್ನು ಜವಳಿ ಪಾರ್ಕ್ ಸ್ಥಾಪನೆಗೆ ಒದಗಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆಯಲಿದೆ. ಕೇಂದ್ರ ಸರ್ಕಾರ ಭೂಮಿ ಒದಗಿಸಿದರೆ ಪಿಪಿಪಿ ಮಾದರಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಸಚಿವರಾದ ಶಿವಾನಂದ ಪಾಟೀಲ ಅವರು ತಿಳಿಸಿದರು.
