ರಾಯಚೂರು ಮಾರ್ಚ್ 10 (ಕರ್ನಾಟಕ ವಾರ್ತೆ): ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ (ಹೀಟ್ ವೇವ್) ಎಚ್ಚರಿಕೆ ನೀಡಲಾಗಿದೆ. ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮನವಿ ಮಾಡುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಏನು ಮಾಡಬೇಕು: ಸಾರ್ವಜನಿಕರು ರೇಡಿಯೋ, ಟಿವಿ, ದಿನ ಪತ್ರಿಕೆಗಳಲ್ಲಿ ಬಿಸಿಲಿನ ತಾಪಮಾನದ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಬೇಕು. ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟುಗಳು ಅಥವಾ ಚಪ್ಪಲಗಳನ್ನು ಬಳಸಬೇಕು.
ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ ಪ್ರಯಾಣ ಮಾಡುವಾಗ ನಿಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗುವುದು. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು.
ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು.
ಆದಷ್ಟು ಫ್ಯಾನಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.
ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು. ನವಜಾತ ಶಿಶುಗಳು, ಹಿರಿಯ ನಾಗರಿಕರು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು, ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.
ಸಾರ್ವಜನಿಕರು ಏನು ಮಾಡಬಾರದು: ಮಕ್ಕಳು ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ/ಅವುಗಳಿಗೆ ಅಪಾಯಕಾರಿಯಾಗಬಹುದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಅಲ್ಲದೆ ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ. ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಬೇಕು. ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಿರಿ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ಪಾನೀಯಗಳನ್ನು ಸೇವಿಸಬೇಡಿ. ಇವು ಹೊಟ್ಟೆ ನೋವನ್ನು ಉಂಟು ಮಾಡುತ್ತದೆ. ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು ಅಲ್ಲದೆ ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

