ಸಿಂಧನೂರು : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಸಿಂಧನೂರು ತಾಲೂಕಿನ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಫಲಾನುಭವಿಗಳಿಗೆ ಬೋರವೆಲ್ ಸಾಮಗ್ರಿಗಳನ್ನು ಇಂದು ಜನಸ್ಪಂದನ ಕಚೇರಿಯಲ್ಲಿ ವಿತರಣೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಸರ್ಕಾರ ಜಾರಿಗೆ ತಂದಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಅದಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವೆನು ಎಂದು ತಿಳಿಸಿದರು. ರೈತರಿಗೆ ನೀರಾವರಿ ಸೌಲಭ್ಯ ದೊರಕಿದರೆ ಕೃಷಿ ಉತ್ಪಾದನೆ ಹೆಚ್ಚಾಗಿ ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂದು ಹೇಳಿದರು.
ಸಣ್ಣ ನೀರಾವರಿ ಇಲಾಖೆಯ ಮೂಲಕ ರೈತರಿಗೆ ನೀಡಲಾಗುತ್ತಿರುವ ಬೋರವೆಲ್ ಸಾಮಗ್ರಿಗಳು ಕೃಷಿ ಚಟುವಟಿಕೆಗಳಿಗೆ ಸಹಾಯಕವಾಗಿದ್ದು, ಇದರ ಮೂಲಕ ಹಲವಾರು ಕುಟುಂಬಗಳು ಸ್ವಾವಲಂಬಿಗಳಾಗಲು ನೆರವಾಗಲಿದೆ ಎಂದು ಹೇಳಿದರು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.
ಈ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅಗತ್ಯ ಬೋರವೆಲ್ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದ್ದು, ರೈತರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೃಷಿ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು, ಕಾರ್ಯಕರ್ತರು ಹಾಗೂ ಅನೇಕ ರೈತರು ಮತ್ತು ಫಲಾನುಭವಿಗಳು ಉಪಸ್ಥಿತರಿದ್ದರು.



