ಮಾನ್ವಿ : ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ., ತಾಲೂಕಿನಲ್ಲಿ 2025–26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ.18ರಿಂದ ಬೆಳಿಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆಗಳನ್ನು ಬರೆಯಲು ಶಿಕ್ಷಣ ಇಲಾಖೆಯಿಂದ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅಖಂಡ ಮಾನವಿ ತಾಲೂಕಿನಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ 5141 ವಿದ್ಯಾರ್ಥಿಗಳು ಹೊಸದಾಗಿ ನೋಂದಾಯಿಸಿಕೊಂಡಿದ್ದು, ಖಾಸಗಿ ಹಾಗೂ ಪುನರಾವರ್ತಿತ ಅಭ್ಯರ್ಥಿಗಳಾಗಿ 874 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 6015 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು.
ತಾಲೂಕಿನಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, 20 ಮುಖ್ಯ ಅಧೀಕ್ಷಕರು, 4 ಉಪ ಮುಖ್ಯ ಅಧೀಕ್ಷಕರು, 20 ಪ್ರಶ್ನೆಪತ್ರಿಕೆ ಅಭಿರಕ್ಷಕರು, 20 ಸ್ಥಾನಿಕ ಜಾಗೃತದಳ ಅಧಿಕಾರಿಗಳು ಹಾಗೂ 7 ಮಾರ್ಗಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ನಕಲು ತಡೆಯಲು ಸೂಕ್ತ ಕ್ರಮ ಕೈಗೊಂಡಿದ್ದು, ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರೀಕ್ಷೆಗಳು ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ನಡೆಯಲಿವೆ ಎಂದು ತಿಳಿಸಿದರು.

