ಮಾನ್ವಿ : ವಿದ್ಯಾರ್ಥಿಗಳು ಶಿಸ್ತು ಹಾಗೂ ಸಮಯಪ್ರಜ್ಞೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕಲ್ಮಠ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ಪಟ್ಟಣದ ಕಲ್ಮಠ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಲಿಂ. ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ಮೂರನೇ ಪುಣ್ಯಾರಾಧನೆ, ಏಳನೇ ತರಗತಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಲ್ಮಠ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಗುರುಗಳವರು ಸದಾ ಸಮಯ ಪಾಲನೆಗೆ ಮಹತ್ವ ನೀಡುತ್ತಿದ್ದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮಯಪ್ರಜ್ಞೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತಿದ್ದರು ಎಂದು ಪೂಜ್ಯರ ವ್ಯಕ್ತಿತ್ವವನ್ನು ಸ್ಮರಿಸಿದರು. ಕಲ್ಮಠ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿ ಹಾಗೂ ಸರ್ವೋದಯ ಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ದತ್ತಾತ್ರೇಯ ಮೇಟಿ ಕಾರ್ಯಕ್ರಮ ಉದ್ಘಾಟಿಸಿ, ಮಾನವಿ ತಾಲೂಕಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲೆಂದು ಗುರುಗಳು ಸಂಸ್ಥೆಯನ್ನು ಸ್ಥಾಪಿಸಿದ್ದರು ಎಂದು ಹೇಳಿದರು. ವಿದ್ಯಾರ್ಥಿಗಳು ಸದಾ ಓದಿನಲ್ಲಿ ತೊಡಗಿಸಿಕೊಂಡು ಕ್ರಿಯಾಶೀಲರಾಗಿರಬೇಕು ಎಂದು ಪ್ರೋತ್ಸಾಹ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕಿ ರಾಚಮ್ಮ ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಹೆಚ್ಚು ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕು ಎಂದು ತಿಳಿಸಿದರು. ಕಾವೇರಿ ಬಸವರಾಜ್, ಕೃಷ್ಣ ವೆಂಕಟೇಶ್ ಹಾಗೂ ಮನೋಹರ ವೀರಭದ್ರಪ್ಪ ಅವರಿಗೆ “ಕಲ್ಮಠ ಶ್ರೀ ವಿದ್ಯಾರತ್ನ ಪ್ರಶಸ್ತಿ” ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ ಕಮತರ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ಪಾಟೀಲ್, ಪದವಿ ಕಾಲೇಜಿನ ಪ್ರಾಚಾರ್ಯ ಸಿದ್ದನಗೌಡ ಪಾಟೀಲ್, ಪ್ರೌಢಶಾಲೆ ಮುಖ್ಯೋಪಾಧ್ಯಾಯ ಪ್ರಭಯ್ಯಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕ ಎಂ.ಎಂ. ಹಿರೇಮಠ್ “ಕಲ್ಮಠ ಶ್ರೀಗಳ ಜೀವನ ಮತ್ತು ಸಾಧನೆ” ಕುರಿತು ಉಪನ್ಯಾಸ ನೀಡಿದರು. ಕೆಮ್ಯಾನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ರೂಪ ಕಾರ್ಯಕ್ರಮ ನಿರೂಪಿಸಿದರು. ರವಿ ಹುಲಿಯಾಪುರ ಸ್ವಾಗತಿಸಿದರು. ರಿಜ್ವಾನ ಬೇಗಂ ವಂದಿಸಿದರು. ಮಹಾಂತಮ್ಮ, ಜಯಶ್ರೀ, ಸೌಮ್ಯ, ಪವಿತ್ರ, ಬ್ರಮರಾಂಭ, ಗೌರಮ್ಮ ಸೇರಿದಂತೆ ಇನ್ನಿತರರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *