ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾರಿಯಾದ ಮಾದರಿ ನೀತಿ ಸಂಹಿತೆಯನ್ನು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣಾ ಆಯೋಗ ಜಾರಿಗೊಳಿಸಿದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರೂ ಸಹಕರಿಸಬೇಕು’ ಎಂದು ತಿಳಿಸಿದರು.

‘ಚುನಾವಣಾ ವೇಳಾಪಟ್ಟಿಯಂತೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ಮಾರ್ಚ್ 23 ಕೊನೆ ದಿನವಾಗಿದೆ. 24ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಮಾರ್ಚ್ 26 ಕೊನೆ ದಿನ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಕ್ತಾಯ ಆಗುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ್‌ಗಳಾದ ವಾಸುದೇವ ಸ್ವಾಮಿ, ಪ್ರದೀಪಕುಮಾರ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.

‘ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಿ’

‘ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷದವರು ಸಭೆ ರ‍್ಯಾಲಿ ವಾಹನಗಳಿಗೆ ತಾತ್ಕಾಲಿಕ ಪಕ್ಷದ ಕಚೇರಿಗೆ ಧ್ವನಿವರ್ಧಕಗಳಿಗೆ ಹೆಲಿಪ್ಯಾಡ್‌ ಹಾಗೂ ಹೆಲಿಕ್ಯಾಪ್ಟರ್ ಹಾರಾಟಕ್ಕೆ ಅನುಮತಿ ಪಡೆದುಕೊಳ್ಳಬೇಕು. ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಎಂಸಿಸಿ ಜಿಲ್ಲಾ ನೋಡಲ್ ಅಧಿಕಾರಿ ಶಶಿಧರ ಕುರೇರ ತಿಳಿಸಿದರು.

‘ಆಯೋಗವು ಸಿವಿಜಿಲ್ ಮೊಬೈಲ್ ಆಯಪ್ ಮೂಲಕ ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ದೂರುಗಳ ಬಗ್ಗೆ ಮಾದರಿ ನೀತಿ ಸಂಹಿತೆ ತಂಡಕ್ಕೆ ಆನ್‍ಲೈನ್ ಮುಖಾಂತರ ತಿಳಿಸುವುದರ ಜೊತೆಗೆ ನಿಗದಿಪಡಿಸಿದ ಸಮಯದೊಳಗೆ ಕ್ರಮ ಜರುಗಿಸಲಾಗುತ್ತದೆ. ಮುಕ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಸಹಕರಿಸಬೇಕು’ ಎಂದರು.

Leave a Reply

Your email address will not be published. Required fields are marked *