ಮಾನ್ವಿ : ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ 2025–26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳು ಶಾಂತಿಯುತವಾಗಿ ನಡೆದವು. ಬೆಳಿಗ್ಗೆ 10 ಗಂಟೆಯಿಂದ ಆರಂಭವಾದ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಆಗಮಿಸಿ ಪರೀಕ್ಷೆಗಳನ್ನು ಬರೆದರು.
ತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗಳ ನೋಡಲ್ ಅಧಿಕಾರಿ ಜೀವನ್ ಸಾಬ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೋಡಲ್ ಅಧಿಕಾರಿ ಜೀವನ್ ಸಾಬ್ ಮಾತನಾಡಿ ತಾಲೂಕಿನ ಎಲ್ಲಾ 20 ಪರೀಕ್ಷಾ ಕೇಂದ್ರಗಳಲ್ಲಿ ಮೊದಲನೇ ದಿನ ಕನ್ನಡ ವಿಷಯದ ಪರೀಕ್ಷೆ ವಿದ್ಯಾರ್ಥಿಗಳು ಉತ್ಸಾಹದಿಂದ ಬರೆದಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ.ಡಿ. ಮಾತನಾಡಿ ಅಖಂಡ ಮಾನವಿ ತಾಲೂಕಿನಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು, ತಾಲೂಕಿನಲ್ಲಿ 5583 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮೊದಲ ದಿನದ ಕನ್ನಡ ಪರೀಕ್ಷೆಗೆ 5413 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದು, 170 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂದು ತಿಳಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟೀವಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದ್ದು, ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. 20 ಮುಖ್ಯ ಅಧೀಕ್ಷಕರು, 4 ಉಪ ಮುಖ್ಯ ಅಧೀಕ್ಷಕರು, 20 ಪ್ರಶ್ನೆಪತ್ರಿಕೆ ಅಭಿರಕ್ಷಕರು, 20 ಸ್ಥಾನಿಕ ಜಾಗೃತದಳ ಅಧಿಕಾರಿಗಳು ಹಾಗೂ 7 ಮಾರ್ಗಾಧಿಕಾರಿಗಳು ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಅಧಿಕಾರಿ ಮಹೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *