ವಿಜಯಪುರ: ಜಿಲ್ಲೆಯಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲಾ ಸಂಬಂಧಿತ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.”ಜಿಲ್ಲೆಯಲ್ಲಿ ಅಪೌಷ್ಠಿಕತೆ ಹಾಗೂ ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಪತ್ತೆಹಚ್ಚಲು ಕೇವಲ ಕಚೇರಿ ದಾಖಲೆಗಳನ್ನು ನಂಬದೆ, ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ತೀವ್ರ ಅಪೌಷ್ಠಿಕತೆಯಿಂದ (SAM) ಬಳಲುತ್ತಿರುವ ಮಕ್ಕಳಿಗೆ ತಕ್ಷಣವೇ ಪೌಷ್ಟಿಕ ಆಹಾರ ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಿ, ಅವರ ಆರೋಗ್ಯ ಸುಧಾರಿಸುವವರೆಗೆ ತೀವ್ರ ನಿಗಾ ವಹಿಸಬೇಕು,” ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಅಂಗನವಾಡಿ ಕೇಂದ್ರಗಳ ಕಾರ್ಯವೈಖರಿಯ ಕುರಿತು ಮಾತನಾಡಿದ ಅವರು:ಮಕ್ಕಳಿಗೆ ವಿತರಿಸುವ ಆಹಾರ ಪದಾರ್ಥಗಳು ಗುಣಮಟ್ಟದಿಂದ ಕೂಡಿರಬೇಕು. ಇದರಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು, ವಿಶೇಷವಾಗಿ ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (CDPO) ಮತ್ತು ಮೇಲ್ವಿಚಾರಕರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು, ಮಳೆಗಾಲ ಸಮೀಪಿಸುತ್ತಿರುವುದರಿಂದ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಕೂಡಲೇ ಮಕ್ಕಳನ್ನು ಸುರಕ್ಷಿತ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು, ಬಾಲ್ಯವಿವಾಹ ಮತ್ತು ಭ್ರೂಣ ಲಿಂಗ ಪತ್ತೆಯಂತಹ ಪಿಡುಗುಗಳ ವಿರುದ್ಧ ಜಿಲ್ಲಾಧಿಕಾರಿಗಳು ಕೆಂಡಾಮಂಡಲವಾದರು. “ಬಾಲ್ಯವಿವಾಹ ಕೇವಲ ಸಾಮಾಜಿಕ ಪಿಡುಗಲ್ಲ, ಅದು ಕ್ರಿಮಿನಲ್ ಅಪರಾಧ. ಎಲ್ಲಿಯಾದರೂ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದ ಪೋಷಕರು ಮತ್ತು ಸಂಬಂಧಿಕರ ಮೇಲೆ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ,” ಎಂದು ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿ ತಿಂಗಳು ತಪ್ಪದೇ ಕಾವಲು ಸಮಿತಿ ಸಭೆ ನಡೆಸಿ, ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು, ಅಪೌಷ್ಠಿಕತೆ ನಿವಾರಣಾ ಕೇಂದ್ರಗಳಲ್ಲಿ (NRC) ದಾಖಲಾಗುವ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಮಗ್ರ ದಾಖಲಾತಿ ನಿರ್ವಹಿಸಬೇಕು, ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕೇಂದ್ರಗಳ ಪಟ್ಟಿ ಸಿದ್ಧಪಡಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು.

