ಮಾನ್ವಿ :ತಾಲೂಕಿನ ಚಿಕ್ಕಕೋಟೆಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲಗಮದಿನ್ನಿ ಗ್ರಾಮವು ಕಳೆದ ಸುಮಾರು 32 ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದಲಿತ ಸೇನೆ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಆರೋಪಿಸಿದರು. 1992ರಲ್ಲಿ ಶಿಪ್ಪಿಂಗ್ ವಿಲೇಜ್ ಎಂದು ಸರ್ಕಾರದಿಂದ ಹಂಚಿಕೆ ಮಾಡಲ್ಪಟ್ಟಿದ್ದರೂ, ಇಂದಿಗೂ ಗ್ರಾಮದಲ್ಲಿ ಸಮರ್ಪಕ ರಸ್ತೆ, ಕುಡಿಯುವ ನೀರು ಹಾಗೂ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂದು ಅವರು ದೂರಿದರು.
ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಗ್ರಾಮದಲ್ಲಿ ರಸ್ತೆ ನಕ್ಷೆಯಲ್ಲಿ ಇದ್ದರೂ ನಿರ್ಮಾಣ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಅಲ್ಲದೆ ಪಂಚಾಯಿತಿ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾರ್ವಜನಿಕರಿಗೆ ಸೂಕ್ತ ಉತ್ತರ ನೀಡದೇ ಉಡಾಫೆ ಧೋರಣೆ ತೋರಿಸುತ್ತಿದ್ದು, ಕೆಲವೊಮ್ಮೆ ನಾಗರಿಕರ ಗುರುತಿನ ಬಗ್ಗೆ ಪ್ರಶ್ನೆ ಕೇಳುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದರು. ಈ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಕುಡಿಯುವ ನೀರು, ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಜೊತೆಗೆ ತಮ್ಮ ಕರ್ತವ್ಯದಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಆಡಳಿತದ ವಿರುದ್ಧ ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

Leave a Reply

Your email address will not be published. Required fields are marked *