ಮುದ್ದೇಬಿಹಾಳ: ತಾಲೂಕಿನ ನಾಲತವಾಡ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸಂಜೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸನ್ಮಾನ ಕಾರ್ಯಕ್ರಮ ನೆರವೇರಿತು.
ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಆಯ್ಕೆಯಾದ ಡಾ. ರಾಜೇಂದ್ರ ಗಲಗಲಿ, ಮಹ್ಮದ ಯೂನುಸ್ ಮೂಲಿಮನಿ, ಸಿದ್ದಣ್ಣ ಕಟ್ಟಿಮನಿ ಹಾಗೂ ವಿನೋದಾ ಅಮಾತಿಗೌಡ ಅವರನ್ನು ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿ ಡಾ. ರಂಗನಾಥ ವೈದ್ಯ, ಸರ್ಕಾರವು ಆರೋಗ್ಯ ರಕ್ಷಾ ಸಮಿತಿಗಳ ಮೂಲಕ ಆಸ್ಪತ್ರೆಗಳ ಅಭಿವೃದ್ಧಿಗೆ ಸ್ಥಳೀಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಮುಂದಾಗಿದೆ. ಸಮಿತಿಯ ಸದಸ್ಯರು ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ, ರೋಗಿಗಳಿಗೆ ಉತ್ತಮ ಸೌಲಭ್ಯ ಒದಗಿಸುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಹೇಳಿದರು.
ಸಮಿತಿ ಸದಸ್ಯ ಸಿದ್ದಣ್ಣ ಕಟ್ಟಿಮನಿ ಮಾತನಾಡಿ, ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವುದಾಗಿ ಭರವಸೆ ನೀಡಿದರು. ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಹಾಗೂ ವ್ಯವಸ್ಥೆಯನ್ನು ಸುಧಾರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು.
ಮತ್ತೊಬ್ಬ ಸದಸ್ಯ ಡಾ. ರಾಜೇಂದ್ರ ಗಲಗಲಿ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಗನಾಥ ವೈದ್ಯ ಅವರ ಸೇವೆಯನ್ನು ಶ್ಲಾಘಿಸಿದರು. ನಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವುದಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

