ಮಸ್ಕಿ: ‘ಬೇಸಿಗೆ ದಿನಗಳಲ್ಲಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಮಂಜುನಾಥ ಭೋಗಾವತಿ ಮತ್ತು ತಾಲ್ಲೂಕು ಪಂಚಾಯಿತಿ ಇಒ ಅಮರೇಶ ಯಾದವ್ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಎಡದಂಡೆ ಸಮಿತಿ ಅವರು, ತುಂಗಭದ್ರಾ ಕಾಲುವೆಗೆ ನೀರು ಹರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲುವೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳು, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತಕ್ಷಣ ಭರ್ತಿ ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
ಬೇಸಿಗೆ ಸಂದರ್ಭದಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಕೊರತೆ ಉಂಟಾದಂತೆ ಮುಂಚಿತವಾಗಿ ಕ್ರಮ ಕೈಗೊಳ್ಳಬೇಕು. ನಾಲೆಗೆ ನೀರು ಹರಿಸಿದಾಗ ಆಯಾ ಗ್ರಾ.ಪಂ ವ್ಯಾಪ್ತಿಯ ಅಧಿಕಾರಿಗಳು ಕೆರೆಗಳನ್ನು ಭರ್ತಿ ಮಾಡುವುದಕ್ಕೆ ಆದ್ಯತೆ ನೀಡಬೇಕು ತಹಶೀಲ್ದಾರ್ ಮಂಜುನಾಥ ಭೋಗಾವತಿ ಹೇಳಿದರು.
ಈಗಾಗಲೇ ಬೇಸಿಗೆ ಆರಂಭವಾಗಿದ್ದರೆ ಕೆಲ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯನ್ನು ಸಾರ್ವಜನಿಕರು ಎದುರಿಸುತ್ತಿದ್ದಾರೆಂಬ ದೂರುಗಳು ಕೇಳಿ ಬಂದಿವೆ. ಕೂಡಲೇ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ತಾಲೂಕಿನ ವಿವಿಧ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಒಟ್ಟು ೨೪ ಕೆರೆಗಳನ್ನು ಭರ್ತಿ ಮಾಡುವ ಮೂಲಕ ನೀರಿನ ಲಭ್ಯತೆ ಹೆಚ್ಚಿಸಬೇಕು ಎಂದರು. ಅಗತ್ಯವಿದ್ದಲ್ಲಿ ಹೆಚ್ಚುವರಿ ಕೊಳವೆಬಾವಿಗಳನ್ನು ಕೊರೆಸಲು, ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಸಿದ್ಧಪಡಿಸಿಕೊಳ್ಳಬೇಕು’ ಎಂದರು.
ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

