ರಾಯಚೂರು ಮಾರ್ಚ್ 27 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯ 250 ಗ್ರಾಮಗಳಲ್ಲೂ ಬಾಲ್ಯ ವಿವಾಹಗಳು ಸಂಪೂರ್ಣ ನಿಲ್ಲಬೇಕು. ಹೆಚ್ಚಾಗಿ ಸಾಮೂಹಿಕ ವಿವಾಹ ಸಂದರ್ಭದಲ್ಲಿಯೇ ಚೈಲ್ಡ್ ಮ್ಯಾರೇಜ್‌ಗಳು ನಡೆಯುವ ಸಾಧ್ಯತೆ ಇದ್ದು, ಈ ಬಗ್ಗೆ ವಿಶೇಷ ನಿಗಾವಹಿಸಬೇಕು. ಇನ್ಮುಂದೆ ಯಾವುದೇ ಕಡೆಗಳಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಾರ್ಚ 27ರಂದು ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯ ವಿವಾಹ ಅನಿಷ್ಠ ಪದ್ಧತಿಯಾಗಿದೆ. ಜನರಲ್ಲಿ ಜಾಗೃತಿಯ ಕೊರತೆಯಿಂದಾಗಿಯೂ ಬಾಲ್ಯ ವಿವಾಹಗಳು ನಡೆಯುತ್ತವೆ. ಈ ಬಗ್ಗೆ ಜನತೆಗೆ ನಿರಂತರವಾಗಿ ಅರಿವು ಮೂಡಿಸುವುದರ ಜೊತೆಗೆ ಯಾವುದೇ ಕಡೆಗಳಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಗೆ ಏನು ಮಾಡಬಹುದು ಎಂಬುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೂಡಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ರಾಯಚೂರು, ಮಾನವಿ, ಸಿಂಧನೂರ, ಮಸ್ಕಿ, ಲಿಂಗಸೂರ, ಸಿರವಾರ, ಅರಕೇರಾ ಮತ್ತು ದೇವದುರ್ಗ ಸೇರಿದಂತೆ ಇನ್ನೀತರ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಅಧಿಕಾರಿಗಳು ಒಗ್ಗೂಡಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಲ್ಯ ವಿವಾಹಗಳು ಯಾವ ಕಡೆಗಳಲ್ಲಿ ಹೆಚ್ಚಾಗಿ ನಡೆಯಬಹುದು ಎಂಬುದರ ಬಗ್ಗೆ ಅರಿಯಬೇಕು. ಬಾಲ್ಯ ವಿವಾಹವಾಗುತ್ತಿರುವ ಬಗ್ಗೆ ಮಾಹಿತಿ ಬಂದ ಕೂಡಲೇ ಅಧಿಕಾರಿಗಳು ಜಾಗೃತರಾಗಿ ಸ್ಥಳಕ್ಕೆ ದಾವಿಸಿ ಬಾಲ್ಯ ವಿವಾಹ ನಿಲ್ಲಿಸಿ, ಬಾಲ್ಯವಿವಾಹ ತಡೆ ಕಾಯ್ದೆಯಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಾಲ್ಯವಿವಾಹಕ್ಕೆ ಸಹಕರಿಸಿದ, ಪ್ರೇರೇಪಿಸಿದವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ವಹಿಸಬೇಕು. ಎಫ್‌ಐಆರ್ ದಾಖಲಿಸಿ ಬಿಸಿ ಮುಟ್ಟಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದರು.
ಜಿಲ್ಲೆಯಲ್ಲಿ ದಾಖಲಾದ ಪೋಕ್ಸೊ÷ ಪ್ರಕರಣಗಳ ಬಗ್ಗೆ ತಾಲೂಕುವಾರು ಮಾಹಿತಿ ನೀಡಬೇಕು. ಇದುವರೆಗೆ ದಾಖಲಾದ ಪ್ರಕರಣಗಳೆಷ್ಟು? ಆಯಾ ಪ್ರಕರಣಗಳಡಿ ಯಾವ ಕ್ರಮವಾಗಿದೆ? ಎಂಬುವುದರ ಬಗ್ಗೆ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಬಾಲ ಗರ್ಭೀಣಿಯರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಆರೋಗ್ಯ ಇಲಾಖೆಯು ತಿಂಗಳುವಾರು ದತ್ತಾಂಶಗಳನ್ನು ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಒದಗಿಸಬೇಕು. ಇದರಿಂದಾಗಿ ಜನಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ನೋಡಲ್ ಅಧಿಕಾರಿಗಳ ನೇಮಿಸಿ: ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಕ್ಕಾಗಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ತಾಲೂಕು ಮಟ್ಟದ ಅಧಿಕಾರಿ ಒಬ್ಬರನ್ನು ನೊಡಲ್ ಅಧಿಕಾರಿಯಾಗಿ ನೇಮಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಬಾಲ್ಯ ವಿವಾಹ ತಡೆ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ರೂಪಿಸಬೇಕು. ಬಾಲ್ಯ ವಿವಾಹ ಅಪರಾಧ ಎಂದು ಜನತೆಗೆ ತಿಳಿಸಿ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ಪೋಷಣ್ ಅಭಿಯಾನ ಯೋಜನೆಯಡಿ ಒಟ್ಟು 2,27,515 ಫಲಾನುಭವಿಗಳು ನೋಂದಣಿಯಾಗಿದ್ದು, ಶೇಕಡಾ 100 ರಷ್ಟು ಫಲಾನುಭವಿಗಳ ಆಧಾರ್ ಪರಿಶೀಲಿಸಲಾಗಿದೆ. ಶೇಕಡಾ 99.59 ರಷ್ಟು ಫಲಾನುಭವಿಗಳ ಮೊಬೈಲ್ ವೆರಿಫಿಕೇಶನ್ ಮುಗಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2856 ಅಂಗನವಾಡಿಗಳ ಪೈಕಿ 1940 ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್‌ಕುಮಾರ ಅವರು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಕಾರ್ಯಕ್ಕೆ ಮೆಚ್ಚುಗೆ: ರಾಯಚೂರು ಜಿಲ್ಲೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ವಿವಿಧ ಚಟುವಟಿಕೆಗಳ ಕಾರ್ಯರೂಪಕ್ಕೆ ತಂದು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕಾಂದೂ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಇದೆ ವೇಳೆ ಸ್ತ್ರೀ ಶಕ್ತಿ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಶ್ರೀದೇವಿ ಶ್ರೀನಿವಾಸ ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ ಎಮ್.ಎನ್., ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ನಜೀರ್ ಅಹಮದ್, ಜಿಲ್ಲಾ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಮನ್ಸೂರ್ ಅಹಮದ್ ಸೇರಿದಂತೆ ಸಂಕಲ್ಪ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಮತ್ತು ವಿವಿಧ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *