ಲಿಂಗಸಗೂರು, ಮಾ.28 :ಬೇಸಿಗೆ ಕಾಲದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಪಂಚಾಯತ್ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೇಟ್ಟಿ ಹೇಳಿದರು .
ಅವರಿಂದು ತಮ್ಮ ಕಚೇರಿಯಲ್ಲಿ ನಡೆಸಿದ ಕುಡಿಯುವ ನೀರಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ.
ಕ್ಷೇತ್ರದ ಸುಮಾರು 140 ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ನೀರಿನ ಕೊರತೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದಲ್ಲಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ತಾಲೂಕಿನ ಸುಮಾರು 21 ಗ್ರಾಮಗಳಲ್ಲಿ ಬೇಸಿಗೆ ವೇಳೆ ಕುಡಿಯುವ ನೀರಿನ ಅಭಾವ ಉಂಟಾಗುವ ಸಾಧ್ಯತೆಗಳಿದ್ದು, ಹಲವು ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುವ ಲಕ್ಷಣಗಳು ಗೋಚರಿಸುತ್ತಿವೆ. ಇದನ್ನು ಮನಗಂಡು ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಕೆಲಸ ಕೈಗೊಳ್ಳಬೇಕು ಜನರಿಗೆ ಆಡಳಿತ ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಯಾಗಿದೆಯೆಂದರು .
ಈ ಸಂದರ್ಭದಲ್ಲಿ ತಹಶೀಲ್ದಾರ್ ಸತ್ಯಮ್ಮ, ತಾಲೂಕು ಪಂಚಾಯತ್ ಅಧಿಕಾರಿ ಉಮೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವೀಂದ್ರ ಉಪ್ಪಾರ, ಜೆಸ್ಕಾಂ ಅಧಿಕಾರಿ ಬನ್ಯಪ್ಪ ಕರಿಬಂಟನಾಳ, ಬಿಇಒ ಸುಜಾತಾ ಹೂನೂರು, ಅಮರೇಶ್ ಪಾಟೀಲ, ನಟರಾಜ್, ಜಗನ್ನಾಥ ಜೋಶಿ, ಪ್ರವೀಣ ಭೋಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

