ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯಲ್ಲಿ 2026–27ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮೂರನೇ ದಿನದ ಪರೀಕ್ಷೆ ಯಾವುದೇ ಅಡಚಣೆಗಳಿಲ್ಲದೆ ಸುಸೂತ್ರವಾಗಿ ನೆರವೇರಿತು.
ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆದರು. ಗಣಿತ ವಿಷಯದಲ್ಲಿ ಒಟ್ಟು 322 ವಿದ್ಯಾರ್ಥಿಗಳಲ್ಲಿ 320 ವಿದ್ಯಾರ್ಥಿಗಳು ಹಾಜರಾಗಿದ್ದು, 2 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಅಮರನಾಥ ಹಳ್ಳೂರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಶಾಂತ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸಲಾಗಿತ್ತು. ಪರೀಕ್ಷೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳ ಪರಿಶೀಲನೆ ನಡೆಸಿ ನಿಯಮಾನುಸಾರ ಪರೀಕ್ಷೆ ಪ್ರಕ್ರಿಯೆ ನಡೆಸಲಾಯಿತು.
ಕೇಂದ್ರದಲ್ಲಿ ಕಸ್ಟೋಡಿಯನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲನಗೌಡ, ಶ್ರೀ ಬಸವರಾಜ ಆನೆಗುಂದಿ, ಸ್ಥಾನಿಕ ಜಾಗೃತ ದಳದ ಸದಸ್ಯರಾದ ಶ್ರೀ ಸಿದ್ದರಾಮೇಶ್ವರ ಹಿರೇಮಠ, ಗಜಾನಂದ ಬಡಿಗೇರ, ದೈಹಿಕ ಶಿಕ್ಷಣ ಶಿಕ್ಷಕ ದೊಡ್ಡಯ್ಯ, ಬಸವರಾಜ ಯಾದಗಿರಿ ಸೇರಿದಂತೆ ಸಿಬ್ಬಂದಿ ವರ್ಗದವರು ಕರ್ತವ್ಯ ನಿರ್ವಹಿಸಿದರು.
ಪರೀಕ್ಷೆ ಸುಗಮವಾಗಿ ನಡೆಯಲು ಶಿಕ್ಷಕರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತೋಷ ವ್ಯಕ್ತಪಡಿಸಿದರು.

