ಮಾನ್ವಿ: ಯಡಿವಾಳ ಗ್ರಾಮದಲ್ಲಿ ರೈತ ನಾಯಕ ಮೌಲಾಲಿ ಅವರ ಮೆಣಸಿನಕಾಯಿ ರಾಶಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ಪೆಟ್ರೋಲ್ ಕ್ಯಾನ್ ಪತ್ತೆಯಾಗಿದ್ದು, ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಮೆಣಸಿನಕಾಯಿ ಸಂಪೂರ್ಣವಾಗಿ ಸುಟ್ಟು ನಾಶವಾಗಿದ್ದು, ರೈತನಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಹೊಲದಲ್ಲಿದ್ದ ಸಾಕ್ಷ್ಯಗಳು ಕಿಡಿಗೇಡಿಗಳ ಸಂಚು ಎನ್ನುವ ಅನುಮಾನವನ್ನು ಮತ್ತಷ್ಟು ಬಲಪಡಿಸುತ್ತಿವೆ.
ಗ್ರಾಮಸ್ಥರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಪ್ಪಿತಸ್ಥರನ್ನು ಶೀಘ್ರವಾಗಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವುದು ಅಗತ್ಯವಾಗಿದೆ.
ರೈತನಿಗೆ ತಕ್ಷಣ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ.


