ಲಿಂಗಸಗೂರು : ಮಾ 31 – ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವ ಣೆಗಳಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಲಿದೆ ಎಂದು ಶಾಸಕ ಯತೀಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಅವರಿಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಹಿನ್ನೆಲೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.
ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಲಿಷ್ಠ ಸಂಘಟನೆ ರೂಪುಗೊಂ ಡಿದ್ದು, ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಅವರ ಬೆಂಬಲದೊಂದಿಗೆ ಸಮರ್ಥವಾಗಿ ಚುನಾವಣೆಯನ್ನು ಎದುರಿಸಲಾಗುತ್ತಿದೆ ಎಂದು ತಿಳಿಸಿದರು.
ಬಾಗಲಕೋಟೆ ಕ್ಷೇತ್ರದಲ್ಲೂ ಉಮೇಶ್ ಮೇಟಿ ಅವರ ಕುಟುಂಬದ ಸದಸ್ಯರು ಸೇರಿದಂತೆ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವ ಹಿಸುತ್ತಿದ್ದು, ಈ ಏಕತೆ ಕಾಂಗ್ರೆಸ್ ಗೆಲುವಿಗೆ ಸಹಾಯಕವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತಗಳಿಲ್ಲ. ಎಲ್ಲ ನಾಯಕರು ಹಾಗೂ ಕಾರ್ಯಕರ್ತರು
ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದ ಜನರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಪಾರ ಪ್ರೀತಿ ಮತ್ತು ವಿಶ್ವಾಸ ಹೊಂದಿದ್ದಾರೆ ಎಂದು ಯತೀಂದ್ರ ಹೇಳಿದರು.
ಸ್ಥಳೀಯ ಸಮಸ್ಯೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ಮುದಗಲ್ ಪ್ರದೇಶದ ಅಭಿವೃದ್ಧಿ ಹಾಗೂ ತಾಯಿ-ಮಕ್ಕಳ ಆಸ್ಪತ್ರೆಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿ ಶೀಘ್ರ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಡಿ.ಎಸ್. ಹೂಲಗೇರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಮುದಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶಂಕರಗೌಡ, ಮುದಕಪ್ಪ (ವಕೀಲರು), ಮಹಮ್ಮದ್ ರಫಿ, ಉಮೇಶ್ ಹುನಕುಂಟಿ, ಖಾಜಾಹುಸೇನ್ ಪೂಲವಾಲೆ, ಬಾಬಾಖಾಜಿ, ಸಂಗಮೇಶ, ಗದ್ದೆನಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

