ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ/ಎಸ್‌ಟಿ ನೌಕರರ ಸಮನ್ವಯ ಸಮಿತಿ ಸಲ್ಲಿಸಿದ್ದ ಮನವಿಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರದ ಆದೇಶ ಸಂಖ್ಯೆ ಸಿಆಸುಇ (ಆಸು) 71 ಸ್ತ್ರೀಮರ 2026, ದಿನಾಂಕ 31.03.2026ರ ಅನ್ವಯ, 2026ರ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಇರುವ ಹಿನ್ನೆಲೆಯಲ್ಲಿ ಕಚೇರಿ ವೇಳೆಯನ್ನು ಬದಲಿಸಲಾಗಿದೆ.
ಯಾವ ಜಿಲ್ಲೆಗಳಿಗೆ ಅನ್ವಯ?
ಬೆಳಗಾವಿ ವಿಭಾಗದ ವಿಜಯಪುರ ಜಿಲ್ಲೆ
ಬೆಳಗಾವಿ ವಿಭಾಗದ ಬಾಗಲಕೋಟೆ ಜಿಲ್ಲೆ
ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳು
ಹೊಸ ಕಚೇರಿ ಸಮಯ
👉 ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ
ಪ್ರಸ್ತುತ ಜಾರಿಯಲ್ಲಿರುವ ಕಚೇರಿ ವೇಳಾಪಟ್ಟಿಗೆ ಬದಲಾಗಿ ಈ ಸಮಯವು ಏಪ್ರಿಲ್ ಮತ್ತು ಮೇ ಮಾಹೆಗಳಿಗೆ ಮಾತ್ರ ಅನ್ವಯವಾಗಲಿದೆ.
ಸರ್ಕಾರದ ಸೂಚನೆ
ಸರ್ಕಾರಿ ನೌಕರರು ಬದಲಾದ ವೇಳೆಯಲ್ಲಿ ಎಂದಿನಂತೆ ಕರ್ತವ್ಯ ನಿರ್ವಹಿಸಬೇಕು.
ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಸೇವೆ ನೀಡಬೇಕು.
ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಸೂಚಿಸಿದರೆ ಸಮಯದ ಮಿತಿ ಇಲ್ಲದೆ ಕರ್ತವ್ಯ ನಿರ್ವಹಿಸಬೇಕಾಗಿದೆ.
ಈ ಆದೇಶವನ್ನು ರಾಜ್ಯಪಾಲರ ಆಜ್ಞಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ವಿಮಲಾಕ್ಷಿ ಬಿ ಅವರು ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *