ಮಾನವಿ ; ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ವಿಧಾನ ಪರಿಷತ್ ಸಭಾ ನಾಯಕ ಶ್ರೀ ಎನ್.ಎಸ್. ಬೋಸರಾಜು ಮತ್ತು ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ್ ಸಾಹುಕಾರ್ ಅವರ ಅಧ್ಯಕ್ಷತೆಯಲ್ಲಿ ಮುಂಬರುವ ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಚಿವರು, ಬೇಸಿಗೆ ಕಾಲ ಆರಂಭವಾಗುವ ಮುನ್ನವೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸರಬರಾಜು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತುಂಗಭದ್ರಾ ಎಡದಂಡೆ ಕಾಲುವೆಯಿಂದ ಬಿಡುಗಡೆ ಮಾಡುತ್ತಿರುವ ನೀರನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಕ್ಷೇತ್ರದ ಎಲ್ಲಾ ಕೆರೆಗಳನ್ನು ಭರ್ತಿ ಮಾಡುವ ಮೂಲಕ ಭೂಗರ್ಭ ಜಲಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಶಾಸಕರಾದ ಜಿ. ಹಂಪಯ್ಯ ನಾಯಕ್ ಸಾಹುಕಾರ್ ಮಾತನಾಡಿ, ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ನಿರಂತರ ಪರಿಶೀಲನೆ ನಡೆಸಬೇಕು ಎಂದು ಹೇಳಿದರು. ಈಗಾಗಲೇ ಚಾಲ್ತಿಯಲ್ಲಿಲ್ಲದ ಕೊಳವೆಬಾವಿಗಳನ್ನು ತಕ್ಷಣ ದುರಸ್ತಿ ಮಾಡಿ, ಫ್ರೆಶಿಂಗ್ ಕಾರ್ಯ ಕೈಗೊಳ್ಳುವ ಮೂಲಕ ನೀರಿನ ಲಭ್ಯತೆ ಹೆಚ್ಚಿಸುವಂತೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ನೀರಿನ ಮೂಲಗಳ ಸ್ಥಿತಿಗತಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ನಿರ್ದೇಶನ ನೀಡಲಾಯಿತು. ನೀರಿನ ಸರಬರಾಜಿನಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮತ್ತು ಶಾಸಕರು ಎಚ್ಚರಿಸಿದರು.
ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಹರಿಸುವ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳೀಯ ಆಡಳಿತದೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಮಾನ್ವಿ ಪಿಐ ಸೋಮಶೇಖರ್ ಕೆಂಚರೆಡ್ಡಿ ಅವರಿಗೆ ಸೂಚಿಸಲಾಯಿತು.
ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಬೂರ್ ಸಾಬ್, ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಬಿ.ಕೆ. ಅಂಬರೇಶಪ್ಪ (ವಕೀಲರು), ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *