ಇಂದಿನ ಸಮಾಜದಲ್ಲಿ ಸಂಸ್ಕಾರದ ಕೊರತೆ ಎದ್ದು ಕಾಣುತ್ತಿದ್ದು, ಪೋಷಕರು ತಮ್ಮ ಮಕ್ಕಳಲ್ಲಿ ಬಾಲ್ಯದಿಂದಲೇ ಉತ್ತಮ ಗುಣಗಳನ್ನು ಬೆಳೆಸುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.
ಅಫಜಲಪುರ ರಸ್ತೆಯ ಶರಣಸಿರಸಗಿ ಬಳಿ ಆಯೋಜಿಸಲಾಗಿದ್ದ ಜಿಲ್ಲಾ ಆದಿ ಬಣಜಿಗ ಸಮಾಜದ ಕಲ್ಯಾಣ ಮಂಟಪ ಹಾಗೂ ವಸತಿ ನಿಲಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಬಸವಾದಿ ಶರಣರ ವಚನ ಸಾಹಿತ್ಯ ಹಾಗೂ ಲಿಂಗಾಯತ ಧರ್ಮದ ಆಚರಣೆಗಳನ್ನು ಮಕ್ಕಳಿಗೆ ಕಲಿಸುವುದರಿಂದ ಅವರ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ.ಮಕ್ಕಳಿಗೆ ಲಿಂಗಪೂಜೆ, ಅಷ್ಟಾವರಣ ಹಾಗೂ ಷಟಸ್ಥಲಗಳ ಬಗ್ಗೆ ಅರಿವು ಮೂಡಿಸಬೇಕು.ಎಲ್ಲರೂ ಒಗ್ಗೂಡಿ ನಡೆದಾಗ ಮಾತ್ರ ಬಲಿಷ್ಠ ಸಮಾಜ ಕಟ್ಟಲು ಸಾಧ್ಯ ಎಂದು ಸಚಿವರು ಕರೆ ನೀಡಿದರು.ಹಾಸ್ಟೆಲ್ ಹಾಗೂ ಕಲ್ಯಾಣ ಮಂಟಪಗಳು ಸಮಾಜದ ಬಡವರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿವೆ. ಇದು ಸಮಾಜದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ ಎಂದರು.ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಹವಾ ಮಲ್ಲಿನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ ಹಾಗೂ ಕೆಕೆಆರ್‌ಡಿಬಿ ಮಾಜಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಪಾಲ್ಗೊಂಡು ಸಮಾಜದ ಸಂಘಟನೆ ಮತ್ತು ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಶಿವಪುತ್ರಪ್ಪ ಬರೂಡೆ, ಬಸವರಾಜ ಕೊನೆಕ್ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

