ಮುದ್ದೇಬಿಹಾಳ ಎ 14 :- ದೇಶದಲ್ಲಿ ಹೆಚ್ಚುತ್ತಿರುವ ಜಾತಿ ಭೇದದ ಗೋಡೆಗಳನ್ನು ಕೆಡವಿ, ಎಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕುವ ಅಗತ್ಯವಿದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ನಮ್ಮ ನಿತ್ಯ ಜೀವನದ ಭಾಗವಾಗಬೇಕು ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಸಿ.ಎಸ್. ನಾಡಗೌಡ ಕರೆ ನೀಡಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಸಂವಿಧಾನವೇ ದೇಶದ ಆತ್ಮ. ಅಂಬೇಡ್ಕರ್ ಅವರ ಆದರ್ಶಗಳು ಪ್ರತಿಯೊಬ್ಬರ ಮನೆಯಲ್ಲಿ ಆಚರಣೆಯಾಗಬೇಕು. ಒಳ ಮೀಸಲಾತಿ ಜಾರಿಯಾಗದ ಹಿನ್ನೆಲೆಯಲ್ಲಿ ಅನೇಕ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಸಮಗ್ರ ಚಿಂತನೆ ನಡೆಸಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಸಮಾಜ ಸೇವಕ ಹಾಗೂ ಕಾಂಗ್ರೆಸ್ ಯುವ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಮಾತನಾಡಿ, “ಒಮ್ಮೆ ಕೆಲ ವರ್ಗಗಳಿಗೆ ಮಾತ್ರ ಸೀಮಿತವಾಗಿದ್ದ ಮತದಾನದ ಹಕ್ಕನ್ನು ಎಲ್ಲರಿಗೂ ನೀಡುವ ಮೂಲಕ ಅಂಬೇಡ್ಕರ್ ಸಮಾನತೆ ಸಾಧಿಸಿದರು. ಆದರೆ ಇಂದಿನ ಪರಿಸ್ಥಿತಿಯಲ್ಲಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಯ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆ ಆಗುತ್ತಿರುವುದು ದುಃಖಕರ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯ ಉಪನ್ಯಾಸಕಿ ಡಾ. ಸುಜಾತಾ ಚಲವಾದಿ ಮಾತನಾಡಿ, “ತಾಯಂದಿರು ದೂರದರ್ಶನಕ್ಕೆ ಸೀಮಿತವಾಗದೆ, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು” ಎಂದು ಸಲಹೆ ನೀಡಿದರು. ಮಾಜಿ ಜಿಪಂ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಶಿಕ್ಷಣದ ಮಹತ್ವವನ್ನು ವಿವರಿಸಿದರು.
ಈ ವೇಳೆ ‘ಮಹಾನ್ ನಾಯಕ’ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಗಿದ್ದು, ಸಾಧಕ ಎಂ.ಕೆ. ಗುಡಿಮನಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಗ್ರಾಮ ಲೆಕ್ಕಾಧಿಕಾರಿ ಗಂಗಾಧರ ಜೂಲಗುಡ್ಡ ಸಂವಿಧಾನ ಪೀಠಿಕೆಯ ಪಠಣ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕೀರ್ತಿ ಚಾಲಕ್, ಇಒ ಸಂಗನಗೌಡ ಬಿರಾದಾರ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸಿಪಿಐ ಮಹಮ್ಮದ್ ಪಸಿವುದ್ದೀನ್, ಬಿಇಒ ಬಿ.ಎಸ್. ಸಾವಳಗಿ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ದಲಿತ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪತ್ರಕರ್ತ ಪರಶುರಾಮ ಕೊಣ್ಣೂರ ಸ್ವಾಗತಿಸಿದರು. ಶಿಕ್ಷಕ ಟಿ.ಡಿ. ಲಮಾಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

