ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ನಡೆದ ಎನ್‌.ಐ‌.ಡಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜ ಮಾತನಾಡಿ, ಆರೋಗ್ಯ ಇಲಾಖೆಯಿಂದ ಪೋಲಿಯೋ ನಿರ್ಮೂಲನೆಗಾಗಿ ಹಾಗೂ ಪೋಲಿಯೋ ಮುಕ್ತ ದೇಶ ನಿರ್ಮಾಣದ ಉದ್ದೇಶದಿಂದ ಜೂ.28ರಂದು ಪೋಲಿಯೋ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಅಂದು ಆರೋಗ್ಯ ಇಲಾಖೆ ಹಾಗೂ ತಾಲೂಕಿನ ವಿವಿಧ ಇಲಾಖೆಗಳ ಸಹಯೋಗದಲ್ಲಿ 0 ರಿಂದ 5 ವರ್ಷದ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ಹೇಳಿದರು.
ತಾಲೂಕಿನಲ್ಲಿ ಒಟ್ಟು 47,877 ಮಕ್ಕಳಿಗೆ ಪೋಲಿಯೋ ಹನಿಗಳನ್ನು ನೀಡುವ ಗುರಿ ಹೊಂದಲಾಗಿದ್ದು, ಆರೋಗ್ಯ ಇಲಾಖೆಯಿಂದ 222 ತಂಡಗಳನ್ನು ರಚಿಸಿ ಮನೆ ಮನೆಗೆ ಭೇಟಿ ನೀಡಿ 0 ರಿಂದ 5 ವರ್ಷದ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದರು.
ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಿಳಿಸಿದರು. ಗ್ರಾಮೀಣ ಭಾಗದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಮೂಲಕ ಶಾಲಾ ವಿದ್ಯಾರ್ಥಿಗಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥ ನಡೆಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕ ನಾಗರಾಜ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ್ ಕುಮಾರ, ಡಾ. ಅಂಬಿಕಾ ಮಧುಸೂಧನ್, ಆರೋಗ್ಯಾಧಿಕಾರಿ ಚಂದ್ರಶೇಖರ್, ಆಶಾ ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *