ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಜೂನ್ 12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸುವಂತೆ ರಾಯಚೂರು ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೂನ್ 02ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12ರಂದು ಬೆಳಗ್ಗೆ 11ಗಂಟೆಗೆ ಎಲ್ಲಾ ಸರ್ಕಾರಿ ನೌಕರರು ತಮ್ಮ ಕಚೇರಿ. ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಒಟ್ಟಾಗಿ ಸೇರಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ-2026ರ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸಹಾಯಕ ಆಯುಕ್ತರು ಸೂಚಿಸಿದರು.
ಜೂನ್.12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯ
ಪ್ರತಿ ಗ್ರಾಮ ಪಂಚಾಯತಿ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಿಬ್ಬಂದಿಗಳು, ಒಟ್ಟಾಗಿ ಸೇರಿ ಕಾರ್ಯಕ್ರಮ ಆಚರಣೆ ಮಾಡಿ ಪ್ರಮಾಣ ವಚನ ಸ್ವೀಕರಿಸುವುದು ಹಾಗೂ ಈ ದಿನದಂದು ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಬಗ್ಗೆ ಡಂಗೂರ ಸಾರುವುದರ ಮೂಲಕ ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನದ ಕುರಿತು ವೇದಿಕೆಯ ಮೇಲೆ ಪ್ರೌಢ ಶಾಲಾ ಮಕ್ಕಳಿಂದ ಚಿತ್ರಕಲಾ ಪ್ರದರ್ಶನ ಹಾಗೂ ಕಿರು ನಾಟಕ ಪ್ರದರ್ಶನ ಕೈಗೊಂಡು ಜಾಗೃತಿಯನ್ನು ಮಾಡಿಸಬೇಕು. ಅಲ್ಲದೆ ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಎಲ್ಲಾ ಪಟ್ಟಣ ಪಂಚಾಯತ್‌ಗಳಲ್ಲಿ ಹಾಗೂ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಆಚರಿಸಿ, ಪ್ರಮಾಣ ವಚನ ಸ್ವೀಕರಿಸಲು ಮತ್ತು ಕಸ ವಿಲೆವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ಜಿಂಗಲ್ಸ್
ಅಥವಾ ಘೋಷಣೆಗಳನ್ನು ಕೂಗಿಸಬೇಕೆಂದು ಸಭೆಯಲ್ಲಿ ಸಹಾಯಕ ಆಯುಕ್ತರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷ ರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಪುಷ್ಪ ಲತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಕಾರ್ಮಿಕ ಇಲಾಖೆಯ ರಾಯಚೂರು ವೃತ್ತದ ನಿರೀಕ್ಷಕರಾದ ಪ್ರಿಯಾಂಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.

Leave a Reply

Your email address will not be published. Required fields are marked *