ನಗರದ ಪಾಟೀಲ್ ಸಿಬಿಎಸ್ಇ ಶಾಲೆಯಲ್ಲಿ ವತಿಯಿಂದ ವಿದ್ಯಾರ್ಥಿಗಳು ಹಾಗೂ ಪಾಲಕರಿಗಾಗಿ ಕೃತಕ ಬುದ್ಧಿಮತ್ತೆ (Artificial Intelligence – AI) ಮತ್ತು ರೋಬೋಟಿಕ್ಸ್ ಡೆಮೊ ಕುರಿತ ವಿಶೇಷ ಪಾಲಕರ ಓರಿಯೆಂಟೇಶನ್ ಕಾರ್ಯಕ್ರಮವನ್ನು ಯಶಸ್ವಿ ಕಾರ್ಯಕ್ರಮದಲ್ಲಿ ಮಾತನಾಡಿದ ಪಾಟೀಲ್ ಸಂಸ್ಥೆಯ ಮುಖ್ಯಸ್ಥ ಆರ್.ಸಿ. ಪಾಟೀಲ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಾಧಾರಿತ ಶಿಕ್ಷಣಕ್ಕೆ ಸೀಮಿತವಾಗದೆ, ತಂತ್ರಜ್ಞಾನ ಜ್ಞಾನವನ್ನು ಕೂಡ ಪಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆ ಪರಿಹಾರ ಕೌಶಲ್ಯ, ತಾರ್ಕಿಕ ಚಿಂತನೆ ಹಾಗೂ ಹೊಸ ಆವಿಷ್ಕಾರಗಳ ಬಗ್ಗೆ ಆಸಕ್ತಿ ಮೂಡಿಸಲು AI ಮತ್ತು ರೋಬೋಟಿಕ್ಸ್ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. . ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮದಲ್ಲಿ ಪಾಲಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.
ತಜ್ಞರು ಕೃತಕ ಬುದ್ಧಿಮತ್ತೆಯ ಮೂಲಭೂತ ಅಂಶಗಳು, ಅದರ ಕಾರ್ಯವೈಖರಿ ಹಾಗೂ ಶಿಕ್ಷಣ, ಆರೋಗ್ಯ, ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅದರ ಬಳಕೆಯ ಕುರಿತು ವಿವರವಾದ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ AI ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಇದರ ಬಗ್ಗೆ ಅರಿವು ಹೊಂದುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ರೀತಿಯ ರೋಬೋಟಿಕ್ಸ್ ಮಾದರಿಗಳ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳೇ ಸಿದ್ಧಪಡಿಸಿದ ಕೆಲವು ಮಾದರಿಗಳು ಹಾಗೂ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ ರೋಬೋಟ್ಗಳ ಪ್ರದರ್ಶನ ಪಾಲಕರ ಗಮನ ಸೆಳೆಯಿತು. ಸೆನ್ಸರ್ ತಂತ್ರಜ್ಞಾನ, ಕೋಡಿಂಗ್ ಹಾಗೂ ಯಂತ್ರಗಳ ಕಾರ್ಯವಿಧಾನದ ಬಗ್ಗೆ ಸರಳವಾಗಿ ವಿವರಿಸಲಾಯಿತು. ರೋಬೋಟ್ಗಳು ಹೇಗೆ ನಿರ್ದೇಶನಗಳನ್ನು ಅನುಸರಿಸುತ್ತವೆ, ಸಮಸ್ಯೆಗಳನ್ನು ಹೇಗೆ ಪರಿಹರಿಸುತ್ತವೆ ಎಂಬುದನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು.
ಪಾಲಕರಿಗೆ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಂತ್ರಜ್ಞಾನದ ಮಹತ್ವ, AI ಮತ್ತು ರೋಬೋಟಿಕ್ಸ್ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳು ಹಾಗೂ ಭವಿಷ್ಯದ ವೃತ್ತಿಜೀವನದ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಶಿಕ್ಷಣಕ್ಕೆ ಸೀಮಿತವಾಗದೆ, ತಂತ್ರಜ್ಞಾನ ಕೌಶಲ್ಯಗಳನ್ನು ಕೂಡ ಬೆಳೆಸಿಕೊಳ್ಳಬೇಕೆಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ಪಾಲಕರು ಶಾಲೆಯ ಈ ವಿನೂತನ ಪ್ರಯತ್ನವನ್ನು ಶ್ಲಾಘಿಸಿ, ಮಕ್ಕಳ ಭವಿಷ್ಯದ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಕೂಡ ರೋಬೋಟಿಕ್ಸ್ ಮತ್ತು AI ಕುರಿತು ಹೆಚ್ಚಿನ ಆಸಕ್ತಿ ತೋರಿಸಿ, ಭವಿಷ್ಯದಲ್ಲಿ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಜ್ಞಾನವನ್ನು ಪಡೆಯುವ ಉತ್ಸಾಹ ವ್ಯಕ್ತಪಡಿಸಿದರು.





