ಮಂಡಲಗುಡ್ಡ :ದೇವದುರ್ಗ ತಾಲೂಕು ಅಮರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಡಲಗುಡ್ಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡಗಳ ಕೊರತೆಯಿಂದ ಗಂಭೀರ ಸಂಕಷ್ಟಕ್ಕೆ ಸಿಲುಕಿದೆ. ಶಿಥಿಲಗೊಂಡಿದ್ದ ಸುಮಾರು 30–35 ವರ್ಷಗಳ ಹಳೆಯ ಶಾಲಾ ಕಟ್ಟಡಗಳನ್ನು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಲೋಕೋಪಯೋಗಿ ಇಲಾಖೆ ತೆರವುಗೊಳಿಸಿದ ಬಳಿಕ, ಶಾಲೆಯಲ್ಲಿ ಕೇವಲ ಎರಡು ಕೊಠಡಿಗಳು ಮಾತ್ರ ಉಳಿದಿವೆ.

ಪ್ರಸ್ತುತ 1ರಿಂದ 7ನೇ ತರಗತಿವರೆಗೆ ಒಟ್ಟು 158 ವಿದ್ಯಾರ್ಥಿಗಳು ಇದೇ ಎರಡು ಕೊಠಡಿಗಳಲ್ಲಿ ಪಾಠ ಕಲಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಾವಕಾಶದ ಕೊರತೆಯಿಂದ ಹಲವಾರು ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ.

ಈ ಕುರಿತು ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಣಾಭಿಮಾನಿಗಳು ಹಲವು ಬಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆರೋಪಿಸಿದ್ದಾರೆ. ಶಾಲಾ ಶಿಕ್ಷಕರು ಕೂಡ ಮೇಲಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದಾರೆ.
ಗ್ರಾಮಸ್ಥರು ಹಾಗೂ ಪೋಷಕರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣವೇ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *