ಮಾನ್ವಿ -: ಜೂನ್ 12 ರಂದು ಆಚರಿಸಲಾಗುವ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚ ರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಕ್ರೈಸ್ಟ್ ಸಂಸ್ಥೆ ತಾಲೂಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂಬಂಧ ಕ್ರೈಸ್ಟ್ ಸಂಸ್ಥೆಯ ಸಿರವಾರ ತಾಲೂಕು ಸಂಯೋಜಕಿ ಶಶಿಕಲಾ ಹಾಗೂ ಮಾನ್ವಿ ತಾಲೂಕು ಸಂಯೋಜಕಿ ಗೀತಾ ಅವರು ಸಿರವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಾನ್ವಿ ತಾಲೂಕಿನ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಮನವಿಯಲ್ಲಿ ಬಾಲಕಾರ್ಮಿಕ ಪದ್ಧತಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಸಮಾಜದಿಂದ ಈ ಅನಿಷ್ಟ ಪದ್ಧತಿ ಸಂಪೂರ್ಣ ನಿರ್ಮೂಲನೆ ಆಗಬೇಕಾಗಿದೆ ಎಂದು ತಿಳಿಸಲಾಗಿದೆ. ಹೋಟೆಲ್ಗಳು, ಗ್ಯಾರೇಜ್ಗಳು, ಅಂಗಡಿಗಳು, ಕೃಷಿ ಚಟುವಟಿಕೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳದಂತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಪುನಃ ಶಾಲೆಗೆ ಸೇರಿಸುವುದು, ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳಿಗೆ ಶಿಕ್ಷಣದ ಮುಖ್ಯವಾಹಿನಿಗೆ ಮರಳಲು ಅವಕಾಶ ಕಲ್ಪಿಸುವುದು ಹಾಗೂ ಮಕ್ಕಳ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಬಾಲ್ಯವು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು, ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ವಾತಾವರಣ ದೊರಕುವಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಸಂಘಗಳ ಸದಸ್ಯರು ಹಾಗೂ ಸಂಸ್ಥೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

