ದೇವದುರ್ಗ, ಜೂನ್ 11: ರಾಯಚೂರು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾದ ಎ. ಉರುಕುಂದಪ್ಪ ಅವರ ಆದೇಶದಂತೆ ದೇವದುರ್ಗ ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ವಿಭಾಗದ ತಾಲೂಕು ಅಧ್ಯಕ್ಷರಾಗಿ ಖಾಸಿಂ ಸಾಬ್ ಬುವಾಜಿ ಗೌರಂಪೆಟ್ ಅವರನ್ನು ನೇಮಕ ಮಾಡಲಾಗಿದೆ.
ಈ ನೇಮಕಾತಿಯು ಜಿ. ಕುಮಾರ್ ನಾಯಕ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಪಾಟೀಲ್ ಇಟಗಿ, ದೇವದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಅಭ್ಯರ್ಥಿ ಶ್ರೀದೇವಿ ಆರ್. ನಾಯಕ್, ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳು ಹಾಗೂ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀಲ್ ಬಕ್ರೀ ಗೌರಂಪೆಟ್ ಅವರ ಶಿಫಾರಸ್ಸು ಮತ್ತು ಆದೇಶದ ಮೇರೆಗೆ ನಡೆದಿದ್ದು, ಖಾಸಿಂ ಸಾಬ್ ಬುವಾಜಿ ಗೌರಂಪೆಟ್ ಅವರಿಗೆ ಅಧಿಕೃತ ಆದೇಶ ಪತ್ರವನ್ನು ನೀಡಲಾಗಿದೆ.
ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ, ಸಾಮಾಜಿಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದರ ಜೊತೆಗೆ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಿ ಈ ಜವಾಬ್ದಾರಿಯನ್ನು ವಹಿಸಲಾಗಿದೆ. ಜಾತಿ, ಧರ್ಮ ಹಾಗೂ ಇತರೆ ಭೇದಭಾವಗಳಿಗೆ ಅವಕಾಶ ನೀಡದೆ ಎಲ್ಲರನ್ನು ಒಗ್ಗೂಡಿಸಿಕೊಂಡು ಕಾರ್ಯನಿರ್ವಹಿಸುವಂತೆ ತಿಳಿಸಲಾಗಿದೆ.
ಅರಕೇರ ಪಟ್ಟಣದಲ್ಲಿರುವ ಶ್ರೀದೇವಿ ಆರ್. ನಾಯಕ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀಲ್ ಬಕ್ರೀ ಗೌರಂಪೆಟ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಲಿಂಗಣ್ಣ ಹವಾಲ್ದಾರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ವೇಳೆ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಾಜಾ ಪಾಶ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಾಬು ಬುವಾಜಿ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

