ಜಾಲಹಳ್ಳಿ, ಜೂನ್ 16: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ತಕ್ಷಣವೇ ಕಾಯಂ ಶಿಕ್ಷಕರನ್ನು ನಿಯೋಜಿಸುವಂತೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಹಾಗೂ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷ ಖುರ್ಷಿದ್ ಪಟೇಲ್, ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರೂ ಅಗತ್ಯ ಪ್ರಮಾಣದ ಕಾಯಂ ಶಿಕ್ಷಕರ ಕೊರತೆಯಿಂದ ಗುಣಮಟ್ಟದ ಶಿಕ್ಷಣ ನೀಡುವುದು ಕಷ್ಟಕರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಹಾಗೂ ಶಾಲೆಯ ಸುಗಮ ನಿರ್ವಹಣೆಗೆ ಕೂಡಲೇ ಕಾಯಂ ಶಿಕ್ಷಕರನ್ನು ನೇಮಿಸಬೇಕು” ಎಂದು ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಭೀಮಣ್ಣ ವಿರಗೋಟ್, ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ತುರ್ತು ಕ್ರಮ ಕೈಗೊಂಡು ಶೀಘ್ರದಲ್ಲೇ ಕಾಯಂ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಜಾಲಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಈಶಣ್ಣ ಕಾಟಮಳ್ಳಿ ಮಾತನಾಡಿ, ಜನತಾ ಕಾಲೋನಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಸರಿಯಾದ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಕೂಡಲೇ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಮುದುರಂಗಪ್ಪ ವಠಾರ ಮಾತನಾಡಿ, ಶಾಲೆಯ ಮುಂಭಾಗದಲ್ಲೇ ಜಿಲ್ಲಾ ಮುಖ್ಯ ರಸ್ತೆ ಇರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಶಾಲೆಯ ಎದುರು ರಸ್ತೆ ಮೇಲೆ ವೇಗ ನಿಯಂತ್ರಕ (ರೋಡ್ ಬ್ರೇಕರ್) ಅಳವಡಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಖುರ್ಷಿದ್ ಪಟೇಲ್, ಸದಸ್ಯ ಹುಸೇನಪ್ಪ ತವಗ, ಪಾಲಕರ ಪ್ರತಿನಿಧಿ ಶಿವಪ್ಪ ಅಂಜಲ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಭೀಮಣ್ಣ ವಿರಗೋಟ್, ಮುದರಂಗಪ್ಪ ವಠಾರ, ಈಶಣ್ಣ ಕಾಡುಮಳ್ಳಿ, ಶಿವಲಿಂಗಪ್ಪ ಗೆಜ್ಜೆಭಾವಿ, ಎಂ.ಡಿ. ಆಸೀಫ್ ಜಿಲಾನಿ ಖಾಜಿ (ದೇವದುರ್ಗ), ಪತ್ರಕರ್ತ ವಲಿ ಕುರೇಶಿ, ಕಾಸಿಂಸಾಬ್ ನಗರಗುಂದ, ಬಾಬುಸಾಬ್ ಗೌರಂಪೇಟ ಸೇರಿದಂತೆ ಶಾಲೆಯ ಮಕ್ಕಳ ಪಾಲಕರು ಹಾಗೂ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *