ರಾಯಚೂರು: ಕನ್ನಡಸೇನೆ-ಕರ್ನಾಟಕ ವತಿಯಿಂದ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜೂನ್ 18ರಂದು “ನಮ್ಮ ನಡೆ ರಾಯಚೂರು ಕಡೆ” ಎಂಬ ಘೋಷಣೆಯಡಿ ಗಡಿನಾಡು ಕನ್ನಡ ಜಾಗೃತಿ ಜಾಥ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು, ರಾಜ್ಯದಾದ್ಯಂತ ಕನ್ನಡ ನಾಮಫಲಕ ಕಡ್ಡಾಯಗೊಳಿಸುವುದು ಹಾಗೂ ಗಡಿನಾಡಿನ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಈ ಜಾಥ ಆಯೋಜಿಸಲಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.

ಜೂನ್ 18ರಂದು ಬೆಳಿಗ್ಗೆ 10.30ಕ್ಕೆ ರಾಯಚೂರಿನ ಆರ್‌ಟಿಓ ವೃತ್ತದಿಂದ ಬೃಹತ್ ಬೈಕ್ ಜಾಥ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಲಿದೆ. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳ ಕನ್ನಡಪರ ಹೋರಾಟಗಾರರು, ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಾಥದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಕನ್ನಡ ಚಳವಳಿಯ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟನೆ ಮನವಿ ಮಾಡಿದೆ.

ಪ್ರಧಾನ ಕಾರ್ಯದರ್ಶಿ ಶಿವಾನಂದ ನಾಯಕ ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು. ರಾಜ್ಯದ ಅನೇಕ ಭಾಗಗಳಲ್ಲಿ ಸರ್ಕಾರಿ ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಹಾಗೂ ಮೂಲಸೌಕರ್ಯ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಅವುಗಳನ್ನು ಮುಚ್ಚುವ ಬದಲು ಅಭಿವೃದ್ಧಿಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಖಾಸಗಿ ಸಂಸ್ಥೆಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸಬೇಕು. ಕನ್ನಡಿಗರಿಗೆ ಖಾಸಗಿ ಮತ್ತು ಸಾರ್ವಜನಿಕ ವಲಯದಲ್ಲಿ ಆದ್ಯತೆ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು. ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಈ ಜಾಥದಲ್ಲಿ ಚಿತ್ರನಟ ಟೆನ್ನಿಸ್ ಕೃಷ್ಣ ಭಾಗವಹಿಸಲಿದ್ದು, ಕನ್ನಡಪರ ಹೋರಾಟಗಾರರಿಗೆ ಪ್ರೋತ್ಸಾಹ ನೀಡಲಿದ್ದಾರೆ. ಕಾರ್ಯಕ್ರಮದ ಕುರಿತು ತಾಲೂಕು ಅಧ್ಯಕ್ಷ ಬಸವರಾಜ್ ಮೈಲಾರಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷ ಸುದರ್ಶನ್ ಪೂಜಾರಿ, ನಗರ ಘಟಕ ಅಧ್ಯಕ್ಷ ಶೇಕ್ ಮುಸ್ತಫಾ, ಹನುಮಂತ ನಾಯಕ ಕರಡಿಗುಡ್ಡ, ನೂರು ಮೊಹಮ್ಮದ್ ನಾಯ್ಕ ಇದ್ದರು.

Leave a Reply

Your email address will not be published. Required fields are marked *