ಸಿಂಧನೂರು.ಜು.5 ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದ ಹಕ್ಕು ಎಲ್ಲರಿಗೂ ಅವಶ್ಯವಾಗಿದ್ದು, ಆ ಹಕ್ಕನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರು ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.ಚುನಾವಣಾ ಆಯೋಗದಿಂದ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಿನ್ನಲೆ ಭಾನುವಾರ ಬಾದರ್ಲಿ ಗ್ರಾಮದ ತಮ್ಮ ನಿವಾಸದಲ್ಲಿ ದಂಪತಿ ಸಮೇತ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನದ ಹಕ್ಕು ಗಟ್ಟಿಗೊಂಡಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳುತ್ತದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಶೇಷ ಪರಿಷ್ಕರಣೆಯಲ್ಲಿ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಜವಾಬ್ದಾರಿ ನಿಭಾಯಿಸಬೇಕು ಎಂದು ಮನವಿ ಮಾಡಿದರು.ಬೂತ್ ಮಟ್ಟದ ಅಧಿಕಾರಿಗಳಿಗೆ ಜನರು ಪೂರ್ಣ ಸಹಕಾರ ನೀಡಿ, ಅಗತ್ಯ ಮಾಹಿತಿಗಳನ್ನು ಒದಗಿಸುವ ಮೂಲಕ ಸರಿಯಾಗಿ ದಾಖಲಾತಿ ಮಾಡಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ: ನಂದಿತಾ ಬಸನಗೌಡ ಬಾದರ್ಲಿ ಸೇರಿದಂತೆ ಬಾದರ್ಲಿ ಗ್ರಾಮದ ಗ್ರಾಮಸ್ಥರು ಸಹ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.


