ಮಾನ್ವಿ; ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಗುವುದು ಎಂದು ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಾತ್ಮಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಹೊಸ ರಾಜಕೀಯ ವೇದಿಕೆಯನ್ನು ರೂಪಿಸಲಾಗುತ್ತಿದೆ ಎಂದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಕಾರ್ಮಿಕರು, ರೈತರು, ಮಹಿಳೆಯರು ಹಾಗೂ ಯುವಜನರನ್ನು ಒಗ್ಗೂಡಿಸಿ ಪರ್ಯಾಯ ರಾಜಕೀಯ ಶಕ್ತಿಯನ್ನು ನಿರ್ಮಿಸುವ ಗುರಿ ನಮ್ಮದಾಗಿದೆ ಎಂದು ಹೇಳಿದರು.
ಪ್ರಸ್ತುತ ಪಕ್ಷದ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ವಿವಿಧ ಸಮಾಜಪರ ಸಂಘಟನೆಗಳು, ದಲಿತ-ಬಹುಜನ ಹೋರಾಟಗಾರರು ಹಾಗೂ ಪ್ರಗತಿಪರ ಚಿಂತಕರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಕರ್ನಾಟಕದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಘಟನೆಯನ್ನು ಬಲಪಡಿಸಿ ಪಕ್ಷವನ್ನು ಜನರ ನಡುವೆ ಕೊಂಡೊಯ್ಯುವ ಗುರಿ ಹೊಂದಿದ್ದೇವೆ ಎಂದು ಅವರು ತಿಳಿಸಿದರು.
2027ರ ಜನವರಿಯಲ್ಲಿ ಹುಬ್ಬಳ್ಳಿ ನಗರದಲ್ಲಿ 25 ಸಾವಿರಕ್ಕೂ ಹೆಚ್ಚು ಜನರ ಭಾಗವಹಿಸುವಿಕೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುವುದು. ಇದೇ ಸಮಾವೇಶದಲ್ಲಿ ಪಕ್ಷದ ಹೆಸರು, ಚುನಾವಣಾ ಚಿಹ್ನೆ, ಧ್ವಜ, ಪ್ರಣಾಳಿಕೆ ಹಾಗೂ ರಾಜ್ಯ ಸಮಿತಿಯನ್ನು ಅಧಿಕೃತವಾಗಿ ಅನಾವರಣಗೊಳಿಸಲಾಗುವುದು ಎಂದು ಚೇತನ್ ಘೋಷಿಸಿದರು.
ಸಮ ಸಮಾಜ ನಿರ್ಮಾಣ, ಸಾಮಾಜಿಕ ನ್ಯಾಯ, ಸಮಾನ ಅವಕಾಶ ಹಾಗೂ ಸಂವಿಧಾನದ ಮೌಲ್ಯಗಳ ಆಧಾರದ ಮೇಲೆ ಜನಪರ ಆಡಳಿತವನ್ನು ರೂಪಿಸುವುದು ಪಕ್ಷದ ಪ್ರಮುಖ ಧೇಯವಾಗಿದೆ ಎಂದು ಚೇತನ್ ಅಹಿಂಸಾ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಭುರಾಜ ಕೊಡ್ಲಿ, ಮಲ್ಲೇಶ್ ಮಾಚನೂರು, ಹನುಮಂತ ಬ್ಯಾಗವಾಟ್, ಸುರೇಶ್ ಬೈಲ್ ಮರ್ಚೆಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *