ಮಾನ್ವಿ: ಕರ್ನಾಟಕ ಸರ್ಕಾರ ಹೊರಡಿಸಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ)–2026 ಅಧಿಸೂಚನೆಯು ಸಾಂವಿಧಾನಿಕ ಮೌಲ್ಯಗಳು ಹಾಗೂ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಗಂಭೀರ ಆತಂಕಗಳಿಗೆ ಕಾರಣವಾಗಿದ್ದು, ಕೇಂದ್ರ ಗೃಹ ಸಚಿವಾಲಯ ತಕ್ಷಣ ಮಧ್ಯಪ್ರವೇಶಿಸಿ ಇದರ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನವು ದೇಶದ ಎಲ್ಲ ನಾಗರಿಕರಿಗೆ ಒಂದೇ ಪೌರತ್ವದ ವ್ಯವಸ್ಥೆಯನ್ನು ಕಲ್ಪಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ “ಶಾಶ್ವತ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ರಚಿಸುವ ಪ್ರಯತ್ನವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದು, ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ಈ ರೀತಿಯ ಪ್ರಮಾಣಪತ್ರ ವಿತರಿಸುವುದು ಪ್ರಶ್ನಾರ್ಹವಾಗಿದೆ ಎಂದು ಹೇಳಿದರು.
ಅಲ್ಲದೆ, ಸಮರ್ಥ ಕೇಂದ್ರ ಸಂಸ್ಥೆಗಳ ಮೂಲಕ ಭಾರತೀಯ ಪೌರತ್ವದ ಸಮಗ್ರ ಪರಿಶೀಲನೆ ನಡೆಸದೇ ಕೇವಲ ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಪ್ರಮಾಣಪತ್ರ ನೀಡಿದರೆ ಅಕ್ರಮ ವಲಸಿಗರು ಹಾಗೂ ವಿದೇಶಿ ಪ್ರಜೆಗಳು ಸಹ ಇದರ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಸರ್ಕಾರಿ ಸೌಲಭ್ಯಗಳು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದುರುಪಯೋಗವಾಗುವ ಅಪಾಯವಿದ್ದು, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರ ಗೃಹ ಸಚಿವಾಲಯವು ಅಧಿಸೂಚನೆಯ ಸಾಂವಿಧಾನಿಕ ಮಾನ್ಯತೆ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಆವರೆಗೆ ಅದರ ಅನುಷ್ಠಾನವನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಇರುವ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಅಧಿಕಾರದ ಕುರಿತು ವಿವರವಾದ ವರದಿ ಪಡೆದು, ಸಮಗ್ರ ಪೌರತ್ವ ಪರಿಶೀಲನೆಯಿಲ್ಲದೆ ಯಾವುದೇ ಶಾಶ್ವತ ನಿವಾಸ ಪ್ರಮಾಣಪತ್ರ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾನ್ವಿ ಮಂಡಳಿ ಅಧ್ಯಕ್ಷ ವೀರಭದ್ರಗೌಡ ಭೋಗವತಿ, ಮುಖಂಡರಾದ ಮಾನಪ್ಪ ನಾಯಕ ಹಾಗೂ ಪ್ರಧಾನ ಕಾರ್ಯದರ್ಶಿ ಗುರುಸಿದ್ದಪ್ಪ ಕಣ್ಣೂರ ಉಪಸ್ಥಿತರಿದ್ದರು.

