ರಾಯಚೂರು, ಜುಲೈ 11: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ಕಾರ್ಯದ ಹಿನ್ನೆಲೆಯಲ್ಲಿ ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಜುಬಿನ್ ಮೋಹಪಾತ್ರ ಅವರು ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು. ಇಂದು ನಗರದ ಬೆರೂನ್ ಕಿಲ್ಲಾ, ಅಂದ್ರೂನ್ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ನಗರ ಪ್ರದೇಶಗಳಿಗೆ ಭೇಟಿ ನೀಡಿದ ಆಯುಕ್ತರು, ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದ ಬೂತ್ ಮಟ್ಟದ ಅಧಿಕಾರಿಗಳ (BLO) ಕಾರ್ಯವೈಖರಿಯನ್ನು ಅವಲೋಕಿಸಿದರು. ಮತದಾರರಿಂದ ಅಗತ್ಯ ದಾಖಲೆಗಳನ್ನು ಪಡೆದು ಮಾಹಿತಿಯನ್ನು ನಿಖರವಾಗಿ ದಾಖಲಿಸಲಾಗುತ್ತಿದೆಯೇ, ಹೊಸ ಮತದಾರರ ಹೆಸರು ಸೇರ್ಪಡೆ, ಮರಣ ಹೊಂದಿದ ಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳ ಪರಿಷ್ಕರಣೆ ಸೇರಿದಂತೆ ವಿವಿಧ ಅಂಶಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ರೀತಿಯ ವಿಳಂಬ, ನಿರ್ಲಕ್ಷ್ಯ ಅಥವಾ ಲೋಪದೋಷಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು. ಪ್ರತಿಯೊಬ್ಬ ಅರ್ಹ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಿಗದಿತ ಅವಧಿಯೊಳಗೆ ಕಾರ್ಯವನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು. ಮನೆ ಮನೆಗೆ ಭೇಟಿ ನೀಡುವ ವೇಳೆ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಮತದಾರರಿಗೆ ಪರಿಷ್ಕರಣೆ ಕಾರ್ಯದ ಉದ್ದೇಶವನ್ನು ಮನವರಿಕೆ ಮಾಡಿಕೊಡಬೇಕು ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸುವ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಸೂಚಿಸಿದರು. ಸಾರ್ವಜನಿಕರ ಸಹಕಾರದಿಂದ ಮಾತ್ರ ನಿಖರ, ಪಾರದರ್ಶಕ ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದರು.
ಪರಿಶೀಲನೆ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.


