ಕವಿತಾಳ ಪಟ್ಟಣದಲ್ಲಿ ಇಂದು ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Intensive Revision–SIR) ಕುರಿತು ಮಹತ್ವದ ಸಭೆ ನಡೆಯಿತು. ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ವಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಅವರು, SIR ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಬೇಕು. ಹೆಸರು ಕೈಬಿಟ್ಟಿದ್ದರೆ ಅಥವಾ ವಿವರಗಳಲ್ಲಿ ದೋಷಗಳಿದ್ದರೆ ಕೂಡಲೇ ಸಂಬಂಧಿಸಿದ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮನೆಮನೆಗೆ ಭೇಟಿ ನೀಡಿ ಮತದಾರರಿಗೆ ಜಾಗೃತಿ ಮೂಡಿಸಬೇಕು. ಹಿರಿಯ ನಾಗರಿಕರು, ಮಹಿಳೆಯರು, ಯುವ ಮತದಾರರು ಹಾಗೂ ಹೊಸದಾಗಿ ಅರ್ಹತೆ ಪಡೆದ ಮತದಾರರಿಗೆ ಅಗತ್ಯ ನೆರವು ನೀಡಬೇಕು. ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ತಪ್ಪಿಹೋಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಸಿರವಾರ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ ದೊರೆ, ಮಾಜಿ ಪುರಸಭೆ ಸದಸ್ಯರಾದ ಬಾಷಾ ಸಾಬ್, ಮೌಲಾಸಾಬ್, ಎಚ್. ಮೌನೇಶ್ ಗೌಡ, ಶರಣಪ್ಪ ಗೌಡ ಮದ್ಲಾಪುರ, ಮೌನೇಶ್ ನಾಯಕ ಹೀರಾ, ರಂಜಿತ್ ಕುಮಾರ್, ದಾನಪ್ಪ ಸಿರವಾರ, ರಾಜಶೇಖರ ತೊಪ್ಪಲದೊಡ್ಡಿ, ಶಶಿಧರ ಗೌಡ (ಕವಿತಾಳ), ಮೋನಪ್ಪ ವಿಶ್ವಕರ್ಮ, ಬ್ಯಾಗವಾಟ್ ಪಟ್ಟಣ ಪಂಚಾಯತಿಯ ಮಾಜಿ ಸದಸ್ಯ ಖಾಜಾಪಾಷಾ, ಹನುಮಂತ ಬುಳ್ಳಾಪುರ, ಸೂಗುರಯ್ಯ ಹಿರೇಮಠ, ಕಿರಿಲಿಂಗ ಕವಿತಾಳ, ಮುಸ್ತಫಾ ಒಂಟಿಬಂಡಿ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ SIR ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಪಕ್ಷದ ವತಿಯಿಂದ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಪ್ರತಿಯೊಬ್ಬ ಅರ್ಹ ಮತದಾರರ ಮತದಾನದ ಹಕ್ಕನ್ನು ಸಂರಕ್ಷಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವಂತೆ ಮುಖಂಡರು ಕರೆ ನೀಡಿದರು.

Leave a Reply

Your email address will not be published. Required fields are marked *