ಕುರುಗೋಡು: ತಾಲೂಕಿನ ಸಮೀಪದ ಎಚ್. ವೀರಾಪುರ ಗ್ರಾಮದಲ್ಲಿ ಇಂದು ಮುಂಜಾನೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮದ ಮುಖಂಡರು ಸೇರಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ತೀವ್ರ ಪ್ರತಿಭಟನೆ ನಡೆಸಿದರು.
ಪ್ರತಿದಿನ ಬಸ್‌ಗಳು ನಿಗದಿತ ಸಮಯಕ್ಕೆ ಬಾರದೆ ತಡವಾಗಿ ಬರುತ್ತಿರುವುದರಿಂದ ತರಗತಿಗಳಿಗೆ ಸಕಾಲದಲ್ಲಿ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಸಾರಿಗೆ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. “ನಾವು ಕಾಲೇಜಿಗೆ ಹೋಗಿ ಕ್ಲಾಸ್ ಅಟೆಂಡ್ ಆಗುವುದು ಯಾವಾಗ? ಪ್ರತಿನಿತ್ಯ ಇದೇ ಕಥೆಯಾದರೆ ನಮ್ಮ ವಿದ್ಯಾಭ್ಯಾಸದ ಗತಿಯೇನು?” ಎಂದು ವಿದ್ಯಾರ್ಥಿಗಳು ತೀವ್ರವಾಗಿ ಪ್ರಶ್ನಿಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ ಗ್ರಾಮದ ಮುಖಂಡರು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಸಾರಿಗೆ ಇಲಾಖೆಯ ಉದಾಸೀನತೆಯನ್ನು ಖಂಡಿಸಿದರು. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಬಂದು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಗ್ರಾಮೀಣ ಭಾಗಕ್ಕೆ ಸಕಾಲದಲ್ಲಿ ಬಸ್ ಸೌಕರ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಸಮಸ್ತ ವಿದ್ಯಾರ್ಥಿ ಬಳಗದವರು ಪಾಲ್ಗೊಂಡಿದ್ದರು. ಪ್ರತಿಭಟನಾ ಸ್ಥಳದಲ್ಲಿದ್ದ ಕಾಲೇಜ್ ವಿದ್ಯಾರ್ಥಿ ವಿಜಯಕುಮಾರ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆಯು ಕೂಡಲೇ ಎಚ್ಚೆತ್ತುಕೊಂಡು ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್
