ತಾಳಿಕೋಟಿ: ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕುಗಳಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿದ್ದು, ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕು ಪಂಚಾಯತಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಳಿಕೋಟಿ ತಾಲೂಕಿನ ಹರನಾಳ, ಗಡಿಸೋಮನಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಮುಂಬರುವ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗದಂತೆ ಸೂಕ್ತ ಕ್ರಿಯಾ ಯೋಜನೆ ರೂಪಿಸಿ, ಸಮಸ್ಯೆ ಪರಿಹಾರಕ್ಕೆ ಈಗಿನಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಆರೋಗ್ಯ ಇಲಾಖೆಯ ಪ್ರಗತಿ ವರದಿ ಪರಿಶೀಲಿಸಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವವರಲ್ಲಿ ಬಹುತೇಕರು ಬಡ ಮತ್ತು ಮಧ್ಯಮ ವರ್ಗದವರಾಗಿದ್ದು, ಅವರಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುತ್ತಿರುವ ಸಾವುಗಳನ್ನು ನಿಯಂತ್ರಿಸಲು ಅಗತ್ಯ ಜಾಗೃತಿ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಹೆಸ್ಕಾಂ ಅಧಿಕಾರಿಗಳಿಂದ ಎರಡೂ ತಾಲೂಕುಗಳ ವಿದ್ಯುತ್ ಪೂರೈಕೆ ವ್ಯವಸ್ಥೆಯ ಕುರಿತು ಮಾಹಿತಿ ಪಡೆದ ಅವರು, ನೀರಿನ ಅಭಾವದ ಪರಿಣಾಮ ವಿದ್ಯುತ್ ಪೂರೈಕೆಯ ಮೇಲೂ ಒತ್ತಡ ಉಂಟಾಗುವ ಸಾಧ್ಯತೆಯಿದೆ. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವುದರ ಜೊತೆಗೆ ಸಾರ್ವಜನಿಕರಲ್ಲಿ ವಿದ್ಯುತ್ ಮಿತ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ನಗರ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ತೆರಳಲು ಅನುಕೂಲವಾಗುವಂತೆ ಅಗತ್ಯ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಾಲಾ ಶಿಕ್ಷಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ತಾಳಿಕೋಟಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿ, ಮುದ್ದೇಬಿಹಾಳ ತಾಪಂ ಇಒ ಸಂಗನಗೌಡ ಬಿರಾದಾರ, ತಾಪಂ ಸಹಾಯಕ ನಿರ್ದೇಶಕ ಕಸನಕ್ಕಿ, ಬಿಇಒ ಬಡದಾನಿ, ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ ತಿವಾರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಎಂ.ಎಂ. ಬೆಳಗಲ್ಲ, ಕೃಷಿ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಸುರೇಶ ಭಾವಿಕಟ್ಟಿ, ಸಿಡಿಪಿಒ ಶಿವಮೂರ್ತಿ ಕುಂಬಾರ ಸೇರಿದಂತೆ ಎರಡೂ ತಾಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *