ಗಾಣದಾಳ್, ನವೆಂಬರ್ 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಾಣದಾಳ್ ವತಿಯಿಂದ ಬುಳ್ಳಾಪುರ ಉಪಕೇಂದ್ರ ವ್ಯಾಪ್ತಿಯ ಗುಂಡರ್ವೇಲಿ ಅಂಗನವಾಡಿ ಕೇಂದ್ರದಲ್ಲಿ “ನಿಮ್ಮ ಆರೋಗ್ಯ ಊಟದ ತಟ್ಟೆಯಲ್ಲಿ” ಎಂಬ ಘೋಷವಾಕ್ಯದೊಂದಿಗೆ ಪೌಷ್ಟಿಕ ಆಹಾರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಗರ್ಭಿಣಿಯರು ಹಾಗೂ ಬಾಣಂತಿಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಟಮಾರಿ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ ಕುಮಾರ್ ಮಾತನಾಡಿ, ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮವಾಗುವುದರ ಜೊತೆಗೆ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಪ್ರತಿದಿನದ ಆಹಾರದಲ್ಲಿ ಪ್ರೋಟೀನ್, ವಿಟಮಿನ್, ಖನಿಜಾಂಶ, ಕಾರ್ಬೋಹೈಡ್ರೇಟ್‌ಗಳ ಸಮತೋಲನ ಇರಬೇಕು. ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮೀನು, ಮೊಳಕೆ ಕಾಳುಗಳು, ತುಪ್ಪ ಹಾಗೂ ಬೆಲ್ಲದಂತಹ ಪೌಷ್ಟಿಕ ಆಹಾರಗಳನ್ನು ಸೇವಿಸಬೇಕು ಎಂದು ಸಲಹೆ ನೀಡಿದರು ಅಲ್ಲದೆ, ಅಡುಗೆ ಮನೆಯ ಸ್ವಚ್ಛತೆ ಕಾಪಾಡಿಕೊಳ್ಳುವುದು, ತರಕಾರಿಗಳನ್ನು ಉಪ್ಪು ನೀರಿನಲ್ಲಿ ತೊಳೆದು ಬಳಸುವುದು, ಅಯೋಡಿನ್ ಯುಕ್ತ ಉಪ್ಪನ್ನು ಉಪಯೋಗಿಸುವುದು ಹಾಗೂ ಗರ್ಭಿಣಿ ಮತ್ತು ಬಾಣಂತಿಯರು ವೈದ್ಯರ ಸಲಹೆಯಂತೆ ಕಬ್ಬಿಣ ಮತ್ತು ಕ್ಯಾಲ್ಸಿಯಂ ಮಾತ್ರೆಗಳನ್ನು ಸೇವಿಸುವುದು ಅಗತ್ಯವೆಂದು ತಿಳಿಸಿದರು. ಉಪಕೇಂದ್ರದಲ್ಲಿ ದೊರೆಯುವ ಆರೋಗ್ಯಸೇವೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಉಷಾರಾಣಿ ಮಾತನಾಡಿ, ಗರ್ಭಿಣಿಯರು ಪ್ರತಿ ತಿಂಗಳು ತಪ್ಪದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮನೆಯಲ್ಲಿಯೇ ತಯಾರಿಸಿದ ಪೌಷ್ಟಿಕ ಆಹಾರಕ್ಕೆ ಆದ್ಯತೆ ನೀಡಬೇಕು. ಬೇಕರಿ ಪದಾರ್ಥಗಳು ಹಾಗೂ ಜಂಕ್ ಫುಡ್ ಸೇವನೆಯನ್ನು ಕಡಿಮೆ ಮಾಡಬೇಕು. ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.

 

ಬಾಣಂತಿಯರು ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸುವ ಮೂಲಕ ಮಕ್ಕಳ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳಬೇಕು. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವುದರ ಜೊತೆಗೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

 

ಅಂಗನವಾಡಿ ಕಾರ್ಯಕರ್ತೆ ಅಂಬುಜಾಕ್ಷಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳಿಗೆ ದೊರೆಯುವ ವಿವಿಧ ಸೌಲಭ್ಯಗಳು ಮತ್ತು ಸೇವೆಗಳ ಕುರಿತು ಮಾಹಿತಿ ನೀಡಿದರು. ಆಶಾ ಕಾರ್ಯಕರ್ತೆ ಪಾರ್ವತಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

.

Leave a Reply

Your email address will not be published. Required fields are marked *