ಸಿರವಾರ, ನ. 4: 64 ವಿಷಯಗಳಲ್ಲಿ ಅಪಾರ ಜ್ಞಾನ ಸಂಪಾದಿಸಿ ಮಹಾನ್ ವಿದ್ವಾಂಸರೆನಿಸಿಕೊಂಡ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟದ ಹಾದಿಯನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಓದಿ, ಅರ್ಥೈಸಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಸಾರ್ಥಕವಾಗುತ್ತದೆ ಎಂದು ಎಂ.ಆರ್.ಹೆಚ್.ಎಸ್. ಜಿಲ್ಲಾಧ್ಯಕ್ಷ ಅಬ್ರಾಹಂ ಹೊನ್ನಟಗಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಯಚೂರು ವತಿಯಿಂದ ಆಯೋಜಿಸಿದ್ದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಗ್ರ ಬದುಕು ಮತ್ತು ಹೋರಾಟದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ಅಂಬೇಡ್ಕರ್ ಅವರು ಅಧ್ಯಯನ ಮಾಡದ ವಿಷಯವೇ ಇಲ್ಲ ಎನ್ನಬಹುದು. ಅವರಂತೆ ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರಂತರ ಪರಿಶ್ರಮ, ಶ್ರದ್ಧೆ ಮತ್ತು ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿದಾಗ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಸಂವಿಧಾನ ರಚನೆಯ ಸಂದರ್ಭದಲ್ಲಿ ಅನೇಕ ಅವಮಾನ ಹಾಗೂ ಸವಾಲುಗಳನ್ನು ಎದುರಿಸಿದರೂ ಎದೆಗುಂದದೆ, ವಿವಿಧ ದೇಶಗಳ ಸಂವಿಧಾನಗಳನ್ನು ಆಳವಾಗಿ ಅಧ್ಯಯನ ಮಾಡಿ ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆಯ ಹಕ್ಕು ದೊರೆಯುವಂತೆ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಾತ್ರವಲ್ಲದೆ, ಇತರ ಹಿಂದುಳಿದ ವರ್ಗಗಳಿಗೂ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಆಶಯಗಳನ್ನು ಸಂವಿಧಾನದಲ್ಲಿ ಅಳವಡಿಸಲಾಗಿದೆ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಹಿಳೆಯರಿಗೂ ಸಮಾನ ಹಕ್ಕು ಮತ್ತು ಮತದಾನದ ಹಕ್ಕು ದೊರೆಯುವಲ್ಲಿ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಬೇಕು. ಆರ್ಥಿಕ ತಜ್ಞರಾಗಿದ್ದ ಅವರು ಕಾರ್ಮಿಕರ ಹಕ್ಕುಗಳು, ಎಂಟು ಗಂಟೆಗಳ ಕೆಲಸದ ಅವಧಿ ಸೇರಿದಂತೆ ಹಲವು ಮಹತ್ವದ ಸುಧಾರಣೆಗಳಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು. ಕಾಲೇಜಿನ ಪ್ರಾಚಾರ್ಯ ಹನುಮಂತ ಚನ್ನೂರು ಮಾತನಾಡಿ, ಜಾತಿ, ಮತ, ಪಂಥಗಳ ಭೇದಭಾವ ಮಾಡದೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾನತೆಯ ಮನೋಭಾವ ಬೆಳೆಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಅಂಬೇಡ್ಕರ್ ಅವರಂತೆ ಸಾಧಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು. ಸರ್ಕಾರದ ವಿವಿಧ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅದೃಷ್ಟವಂತರು ಎಂದರು.
ಕಾರ್ಯಕ್ರಮದಲ್ಲಿ ರಸಪ್ರಶ್ನೆ, ಪ್ರಬಂಧ ಹಾಗೂ ಆಶುಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚನ್ನಪ್ಪ ಚನ್ನೂರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಸದಸ್ಯ ಅಜಿತ್ ಕುಮಾರ್ ಹೊನ್ನಟಗಿ, ಸೂರಿ ದುರುಗಣ್ಣ ನಾಯಕ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹನುಮೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಸ್ಮಾಯಿಲ್, ಚನ್ನಬಸವ ಹಾಗೂ ಉಪನ್ಯಾಸಕ ಜಯಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಯಾಸೀನ್ ಅವರು ನಡೆಸಿಕೊಟ್ಟರು
