ನಿರುದ್ಯೋಗ, ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ನೇಮಕಾತಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಯುವಜನತೆ ಸಂಘಟಿತರಾಗಲಿ ರಾಜಸ್ಥಾನದ ಜೈಪುರದಲ್ಲಿ ನವೆಂಬರ್ 27, 28 ಮತ್ತು 29ರಂದು ನಡೆಯಲಿರುವ ಎಐಡಿವೈಒ (AIDYO) 4ನೇ ಅಖಿಲ ಭಾರತ ಯುವಜನ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಸಂಘಟನೆಯ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ್ ಕರೆ ನೀಡಿದರು. ಸಮ್ಮೇಳನದ ಅಂಗವಾಗಿ ನಿರುದ್ಯೋಗ, ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ನೇಮಕಾತಿ, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಆನ್ಲೈನ್ ಬೆಟ್ಟಿಂಗ್ ಹಾವಳಿಯನ್ನು ವಿರೋಧಿಸುವ ಪೋಸ್ಟರ್ಗಳನ್ನು ಸಂಘಟನೆಯ ಕಚೇರಿಯಲ್ಲಿ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಅವುಗಳನ್ನು ಭರ್ತಿ ಮಾಡುತ್ತಿಲ್ಲ. ಅಪರೂಪಕ್ಕೆ ನಡೆಯುವ ನೇಮಕಾತಿಗಳಲ್ಲಿಯೂ ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ. ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳು ರದ್ದಾಗುತ್ತಿದ್ದು, ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಇನ್ನೊಂದೆಡೆ ಮಾದಕ ವ್ಯಸನ, ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಹೆಚ್ಚುತ್ತಿವೆ. ಆನ್ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಹಾವಳಿಯಿಂದ ಯುವಜನರ ಬದುಕು ಹಾಳಾಗುತ್ತಿದ್ದು, ಆತ್ಮಹತ್ಯೆಯಂತಹ ದುರಂತ ಘಟನೆಗಳೂ ನಡೆಯುತ್ತಿವೆ. ಇಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಯುವಜನತೆ ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಸಮ್ಮೇಳನದ ಗಣ್ಯರು
ಜೈಪುರದಲ್ಲಿ ನಡೆಯಲಿರುವ ಈ ಸಮ್ಮೇಳನವನ್ನು ಖ್ಯಾತ ಆರ್ಥಿಕ ತಜ್ಞರು ಹಾಗೂ ಜೆಎನ್ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಅರುಣ್ ಕುಮಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಕೇಂದ್ರ ಸಮಿತಿ ಸದಸ್ಯ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ. ಎಐಡಿವೈಒ ಪ್ರಧಾನ ಕಾರ್ಯದರ್ಶಿ ಅಮರ್ಜಿತ್ ಕುಮಾರ್ ಭಾಷಣ ಮಾಡಲಿದ್ದಾರೆ. ಬಹಿರಂಗ ಅಧಿವೇಶನದ ಅಧ್ಯಕ್ಷತೆಯನ್ನು ಅಖಿಲ ಭಾರತ ಅಧ್ಯಕ್ಷ ನಿರಂಜನ್ ನಮಸ್ಕಾರ್ ವಹಿಸಲಿದ್ದು, ಸಮಾರೋಪ ಭಾಷಣವನ್ನು ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪ್ರವಾಷ್ ಘೋಷ್ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎಐಡಿವೈಒ ಜಿಲ್ಲಾ ಅಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿ, ಯುವಜನ ಸಮ್ಮೇಳನದ ಪೂರ್ವಭಾವಿಯಾಗಿ ಜಿಲ್ಲೆಯಾದ್ಯಂತ ಯುವಜನರ ಗುಂಪು ಚರ್ಚೆಗಳು, ಸದಸ್ಯತ್ವ ಅಭಿಯಾನ, ಸಂಘಟನೆಯ ಘಟಕ ರಚನೆ ಸೇರಿದಂತೆ ವಿವಿಧ ರೀತಿಯ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ವಿನೋದ್, ಸಂದೀಪ್ ಗೌಡ, ಶಿವಪ್ಪ ಅಸ್ಕಿಹಾಳ್, ಅಶೋಕ್ ಪೂಜಾರಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
