ಸಿಂಧನೂರು, ನವೆಂಬರ್ 05: ತಾಲೂಕಿನ ಸಮೀಪದ ಜವಳಗೇರಾ ಗ್ರಾಮದ ಮಾರುತಿ ನಗರದ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂಧನೂರು ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ, ಆರೋಗ್ಯಕರ ಜೀವನಶೈಲಿ, ವೈಯಕ್ತಿಕ ಸ್ವಚ್ಛತೆ, ಪರಿಸರ ನೈರ್ಮಲ್ಯ ಹಾಗೂ ಸಮತೋಲಿತ ಪೌಷ್ಟಿಕ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು.
ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರ ಸೇವನೆ ಅತ್ಯಂತ ಅಗತ್ಯವಾಗಿದೆ. ಗರ್ಭಾವಸ್ಥೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮವಾಗಿರುತ್ತದೆ. ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ತಾಯಿಯ ಆರೋಗ್ಯ ಸುಧಾರಿಸುವುದರ ಜೊತೆಗೆ ಎದೆಹಾಲುಣಿಸುವಿಕೆಗೆ ಸಹಕಾರಿಯಾಗುತ್ತದೆ. ಮಗುವಿಗೆ ಜನನದಿಂದ ಆರು ತಿಂಗಳವರೆಗೆ ತಾಯಿಯ ಎದೆಹಾಲನ್ನು ಮಾತ್ರ ನೀಡಬೇಕು. ಆರು ತಿಂಗಳ ನಂತರ ಎದೆಹಾಲಿನೊಂದಿಗೆ ಪೂರಕ ಪೌಷ್ಟಿಕ ಆಹಾರ ನೀಡಬೇಕು ಎಂದು ತಿಳಿಸಿದರು.
