ಕುಷ್ಟಗಿ: ರಾಜ್ಯ ಸರ್ಕಾರ ಹಾಲಿನ ದರ ಹಾಗೂ ಬಸ್ ಸಾರಿಗೆ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದೆ. ಸರ್ಕಾರದ ಈ ಜನವಿರೋಧಿ ನೀತಿಯನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ವೀರೇಶ ನಿಡಗುಂದಿಮಠ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಹಾಲಿನ ದರ ಹಾಗೂ ಸಾರಿಗೆ ಪ್ರಯಾಣ ದರ ಹೆಚ್ಚಿಸಿರುವುದು ಜನರ ಬದುಕಿನ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಹಾಲು ಖರೀದಿಸುವ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಮತ್ತು ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕಾರ್ಯಗಳಿಗಾಗಿ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಪ್ರಯಾಣಿಕರಿಗೆ ಈ ದರ ಏರಿಕೆ ಮತ್ತಷ್ಟು ಹೊರೆಯಾಗಲಿದೆ. ಜನರ ಜೀವನಮಟ್ಟ ಸುಧಾರಿಸಬೇಕಾದ ಸರ್ಕಾರವೇ ಜನರ ಜೇಬಿಗೆ ಕತ್ತರಿ ಹಾಕುತ್ತಿರುವುದು ದುರಂತದ ಸಂಗತಿ ಎಂದು ಟೀಕಿಸಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ಒಂದರ ಮೇಲೊಂದರಂತೆ ದರ ಏರಿಕೆ ಮಾಡುತ್ತಿರುವುದು ಸರಿಯಲ್ಲ. ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಜನರ ಮೇಲೆ ಆರ್ಥಿಕ ಹೊರೆ ಹೇರುತ್ತಿರುವುದು ಜನವಿರೋಧಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಏನು? ಜನರ ಮೇಲೆ ನಿರಂತರ ಹೊರೆ ಹೇರುವ ಬದಲು ಮಧ್ಯಂತರ ಚುನಾವಣೆ ಎದುರಿಸಿ ಜನಾದೇಶ ಪಡೆಯಲಿ ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಹಾಲು ಹಾಗೂ ಸಾರಿಗೆ ದರ ಏರಿಕೆ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವೀರೇಶ ನಿಡಗುಂದಿಮಠ ಆಗ್ರಹಿಸಿದ್ದಾರೆ.
