ರಾಯಚೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟ, ದಲಿತ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

 

‘ವೋಟ್ ಬಚಾವ್, ದೇಶ್ ಬಚಾವ್’ (ಮತ ಉಳಿಸಿ, ದೇಶ ಉಳಿಸಿ) ಎಂಬ ಘೋಷವಾಕ್ಯದೊಂದಿಗೆ ನಡೆದ ಪ್ರತಿಭಟನೆಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

 

ಈ ಸಂದರ್ಭದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಣಕು ಪ್ರದರ್ಶನ ನಡೆಸಿ, ವಿವಿಧ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ಗಮನ ಸೆಳೆದರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಹಾಗೂ ಯಾವುದೇ ಅರ್ಹ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಬಾರದು ಎಂದು ಆಗ್ರಹಿಸಿದರು.

 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನದ ಅವಕಾಶ ದೊರೆಯಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಗೊಂದಲ ಅಥವಾ ಲೋಪದೋಷಗಳಿಗೆ ಅವಕಾಶ ನೀಡಬಾರದು. ಜನಸಾಮಾನ್ಯರ ಮತದಾನದ ಹಕ್ಕನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

 

ಎಸ್‌ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಪ್ರಯತ್ನ: ಬೋಸರಾಜು ಆರೋಪ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಪ್ರಕ್ರಿಯೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ದೇಶಾದ್ಯಂತ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಆರಂಭದಿಂದಲೂ ಮತಗಳ್ಳತನದ ವಿರುದ್ಧ ದೇಶಾದ್ಯಂತ ಧ್ವನಿ ಎತ್ತಿ ಹೋರಾಟ ನಡೆಸುತ್ತಿದ್ದರೂ ಚುನಾವಣಾ ಆಯೋಗ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಬದಲಾಗಿ ಬಿಜೆಪಿಯ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದರು. ಈಗ ಮತದಾರರು ಜಾಗೃತರಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ಹಾಗೂ ವಿರೋಧ ಪಕ್ಷಗಳು ಹೋರಾಟಕ್ಕೆ ಕೈಜೋಡಿಸುತ್ತಿವೆ. ಜನರ ಹೋರಾಟದಿಂದ ಕೇಂದ್ರ ಸರ್ಕಾರಕ್ಕೆ ನಡುಕ ಶುರುವಾಗಿದೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಮತಗಳ್ಳತನದ ಕುರಿತು ಬಹಿರಂಗವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.

 

ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಈ ಹೋರಾಟವನ್ನು ಮತ್ತಷ್ಟು ಬಲಪಡಿಸಬೇಕಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಈ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎನ್.ಎಸ್. ಬೋಸರಾಜು ಹೇಳಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಇಂಡಿಯಾ ಮೈತ್ರಿಕೂಟದ ಪ್ರತಿನಿಧಿಗಳು, ದಲಿತ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಭಾಗವಹಿಸಿದ್ದರು.ಸೂಚನೆ: ಎಸ್‌ಐಆರ್, ಬಿಜೆಪಿ ಮತ್ತು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಆರೋಪಗಳು ಪ್ರತಿಭಟನೆಯಲ್ಲಿ ಎನ್.ಎಸ್. ಬೋಸರಾಜು ಅವರು ಮಾಡಿದ ಹೇಳಿಕೆಗಳಾಗಿವೆ.

Leave a Reply

Your email address will not be published. Required fields are marked *