ಕುಷ್ಟಗಿ: ಕೊಪ್ಪಳದಲ್ಲಿ ಇಂದು ನಡೆದ “ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ” ಎಂಬ ಘೋಷವಾಕ್ಯದೊಂದಿಗೆ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಾ. ಕಾಸಂ ವೆಂಕಟೇಶ್ವರಲು ಅವರನ್ನು ಕುಷ್ಟಗಿ ಮಂಡಲ ಬಿಜೆಪಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ದೊಡ್ಡನಗೌಡ ಎಚ್. ಪಾಟೀಲ ಮಾತನಾಡಿ, ಚುನಾವಣೆಯಲ್ಲಿ ಗೆದ್ದಾಗ ಇವಿಎಂ ಸರಿಯಿದೆ ಎಂದು ಹೇಳುವ ಕಾಂಗ್ರೆಸ್, ಸೋತಾಗ ಇವಿಎಂ ಮೇಲೆ ಆರೋಪ ಮಾಡುವುದು ಅದರ ರಾಜಕೀಯ ಚಾಳಿಯಾಗಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಲಾಗಿದೆ. ರೈತರಿಗೆ ಬರ ಪರಿಹಾರ ನೀಡುವಲ್ಲಿಯೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವುದು ನಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಮಹಾಂತೇಶ ಬಾದಾಮಿ, ಕೆ. ಮಹೇಶ, ಶಶಿಧರ ಕವಲಿ, ಕಲ್ಲೇಶ ತಾಳದ, ಶರಣು ತಳ್ಳಿಕೇರಿ, ಸಂಗನಗೌಡ ಜೈನರ, ಲಾಡಸಾಬ ಕೊಳ್ಳಿ ದೇವರಾಜ ಅಜಾಳ, ಮುತ್ತು ರಾಠೋಡ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *