:ಸಿಂಧನೂರು ನ 08 :ಕಲ್ಯಾಣ ಕರ್ನಾಟಕ ದರ್ವೇಶ್ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸಂಘಟನೆಯನ್ನು ತಾಲೂಕು ಮಟ್ಟದಲ್ಲಿ ಬಲಪಡಿಸುವ ಉದ್ದೇಶದಿಂದ ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯಕ್ರಮದ ಅಂಗವಾಗಿ ಇಂದು ಸಾಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.
ದರ್ವೇಶ್ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗವು ಇಂದಿಗೂ ಶೈಕ್ಷಣಿಕ, ಆರ್ಥಿಕ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಜನಾಂಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಬಡ ಕುಟುಂಬಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳು ತಲುಪಬೇಕು ಹಾಗೂ ನಿರ್ಗತಿಕರಿಗೆ ಅಗತ್ಯ ವೈದ್ಯಕೀಯ ನೆರವು ದೊರೆಯಬೇಕು ಎಂಬುದು ಸಂಘದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.
ಈ ನಿಟ್ಟಿನಲ್ಲಿ ತಾಲೂಕು ಅಧ್ಯಕ್ಷರಾಗಿ ನೇಮಕಗೊಳ್ಳುವವರು ಪ್ರಾಮಾಣಿಕವಾಗಿ ಸಮಾಜ ಸೇವೆ ಸಲ್ಲಿಸುವುದರ ಜೊತೆಗೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಸಂಘದಲ್ಲಿ ಯಾವುದೇ ಜಾತಿ, ಧರ್ಮ ಹಾಗೂ ರಾಜಕೀಯ ಪಕ್ಷಗಳ ಭೇದಭಾವವಿಲ್ಲದೆ ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಸಂಘಟನೆಯ ಮೂಲಕ ಜನಾಂಗದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮತ್ತು ಸರ್ಕಾರದ ಗಮನ ಸೆಳೆಯಲು ನಿರಂತರ ಹೋರಾಟ ನಡೆಸಲಾಗುವುದು. ನಮ್ಮ ಸಂಘಟನೆ ನಮ್ಮ ಶಕ್ತಿ, ನಮ್ಮ ಒಗ್ಗಟ್ಟು ನಮ್ಮ ಜನಾಂಗದ ಅಭಿವೃದ್ಧಿಗೆ ಮುನ್ನಡಿ ಎಂದು ಹೇಳಿದರು.
ಪತ್ರಿಕಾಗೋಷ್ಠಿಯ ಮುಖ್ಯ ಉದ್ದೇಶ ತಾಲೂಕು ಅಧ್ಯಕ್ಷರ ನೇಮಕಾತಿ ಘೋಷಣೆ, ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವುದು, ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಶೈಕ್ಷಣಿಕ, ಆರ್ಥಿಕ ಮತ್ತು ವೈದ್ಯಕೀಯ ಸೌಲಭ್ಯಗಳಿಗಾಗಿ ಹೋರಾಟ ರೂಪಿಸುವುದು ಹಾಗೂ ಸಂಘದ ಮುಂದಿನ ಕಾರ್ಯಯೋಜನೆಗಳನ್ನು ಮಾಧ್ಯಮಗಳ ಮೂಲಕ ಜನರಿಗೆ ತಿಳಿಸುವುದಾಗಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ರಹೀಂ ಶಾ ಮಕಾಂದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೋಹಿನುದ್ದೀನ್ ಬಂಡಾರಿ, ಸಿಂಧನೂರು ತಾಲೂಕು ಅಧ್ಯಕ್ಷರಾಗಿ ನೇಮಕಗೊಂಡ ಮಸ್ತಾನ್, ಜಿಲ್ಲಾ ಉಪಾಧ್ಯಕ್ಷರಾದ ಎಂ.ಆರ್. ಮಹಿಬೂಬ್ ಪಾಷಾ, ಜಿಲ್ಲಾ ಖಜಾಂಚಿಗಳಾದ ಬಾಹುಮಿಯ ಹಾಗೂ ತಾಲೂಕು ಸದಸ್ಯರಾದ ಅನ್ವರ್ ಪಾಷಾ ಉಪಸ್ಥಿತರಿದ್ದರು.
