ರಾಯಚೂರು: ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ರಾಯಚೂರು ನಗರದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಗೌರವಪೂರ್ವಕವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಅವರ ಜೀವನ, ಸಾಧನೆ, ದೇಶಪ್ರೇಮ, ಧೈರ್ಯ ಮತ್ತು ಬ್ರಿಟಿಷರ ವಿರುದ್ಧ ನಡೆಸಿದ ಹೋರಾಟವನ್ನು ಸ್ಮರಿಸಲಾಯಿತು. ದೇಶದ ಸ್ವಾತಂತ್ರ್ಯ ಮತ್ತು ಸ್ವಾಭಿಮಾನಕ್ಕಾಗಿ ಹೋರಾಡಿದ ಐತಿಹಾಸಿಕ ವ್ಯಕ್ತಿಗಳ ಆದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಮುಖಂಡರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಲ್.ವಿ. ಸುರೇಶ್, ಜಿಲ್ಲಾಧ್ಯಕ್ಷರಾದ ರಾಮಕೃಷ್ಣ ಪ್ರಸಾದ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೃಷ್ಣ, ಮೈನಾರಿಟಿ ಕಮಿಟಿ ಅಧ್ಯಕ್ಷರಾದ ಅನ್ವರ್, ಮೈನಾರಿಟಿ ಕಮಿಟಿಯ ಗೌರವಾಧ್ಯಕ್ಷರಾದ ಜಲಾಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಯಚೂರು ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, ಯುವಕರು ಹಾಗೂ ಸಮಸ್ತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಾತಿ, ಧರ್ಮ, ಭಾಷೆ ಎಂಬ ಭೇದಭಾವಗಳನ್ನು ಮೀರಿ ಪರಸ್ಪರ ಗೌರವ, ಸಹೋದರತ್ವ, ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆಯನ್ನು ಬೆಳೆಸುವ ಸಂದೇಶವನ್ನು ಕಾರ್ಯಕ್ರಮ ಸಾರಿತು.
ಟಿಪ್ಪು ಸುಲ್ತಾನ್ ಅವರ ಹೋರಾಟದ ಇತಿಹಾಸವನ್ನು ಸ್ಮರಿಸುವುದರೊಂದಿಗೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾನತೆಯ ಮೌಲ್ಯಗಳನ್ನು ಎತ್ತಿಹಿಡಿಯುವ ಸಂಕಲ್ಪದೊಂದಿಗೆ ಜಯಂತಿ ಆಚರಣೆ ನಡೆಯಿತು.
