ಕಂಪ್ಲಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಮಾರ್ಗದರ್ಶನದಂತೆ ದೀಪಾವಳಿ ಹಬ್ಬದ ಪ್ರಯುಕ್ತ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿದ್ದ ಅಕ್ರಮ ಜೂಜಾಟದ ಅಡ್ಡೆಗಳ ಮೇಲೆ ಕಂಪ್ಲಿ ಠಾಣೆಯ ಪೊಲಿಸ್ ಇನ್ಸ್ಪೆಕ್ಟರ್(ಪಿ. ಐ.) ಕೆ. ಬಿ. ವಾಸು ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿಕೊಂಡು 54 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹2,16,000 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ವಿಶೇಷ ಗಸ್ತು ಮತ್ತು ಕಾರ್ಯಾಚರಣೆ ಕೈಗೊಂಡಿದ್ದರು. ಖಚಿತ ಮಾಹಿತಿಯ ಮೇರೆಗೆ ಕಂಪ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ನಡೆದ ಈ ದಾಳಿಗಳಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ 8 ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಹಬ್ಬದ ನೆಪದಲ್ಲಿ ಸಾರ್ವಜನಿಕರು ಜೂಜಾಟದಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

Leave a Reply

Your email address will not be published. Required fields are marked *